ಕೋವಿಡ್ ಪಾಸಿಟಿವಿಟಿ ರೇಟ್ ಕಡಿಮೆ ಇರುವ 16 ಜಿಲ್ಲೆಗಳಲ್ಲಿ ಲಾಕ್ ಡೌನ್ ಮತ್ತಷ್ಟು ಸಡಿಲಿಕೆ

ಬೆಂಗಳೂರು: ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇ. 5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10ರಷ್ಟು ಇದೆ. ಮೈಸೂರಿನಲ್ಲಿ ಶೇ. 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ.

ಈ ಪಾಜಿಟಿವಿಟಿ ದರದ ಆಧಾರದ ಮೇಲೆ ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗಿದೆ.

ಶೇ 5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ ಈ ಕೆಳಕಂಡ ಸಡಿಲಿಕೆಗಳನ್ನು ನೀಡಲಾಗಿದೆ.

*ಎಲ್ಲಾ ಅಂಗಡಿಗಳನ್ನು ಸಂಜೆ 5 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು.
*ಎಸಿ ಚಾಲನೆಗೊಳಿಸದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5 ಗಂಟೆವರೆಗೆ  ಶೇ. 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು.

•ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.
•ಬಸ್‌ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.
•ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.

•ಸರ್ಕಾರಿ- ಖಾಸಗಿ ಕಚೇರಿಗಳಿಗೆ ಶೇ 50ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.
•ಲಾಡ್ಜ್‌ ಗಳಲ್ಲಿ ಮತ್ತು ರೆಸಾರ್ಟ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.
•ಜಿಮ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.

ಶೇ 5ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ಜೂನ್ 11ರಂದು ಹೊರಡಿಸಿರುವ ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ. 

•ಶೇ. 10 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುವುದು.

ರಾಜ್ಯವ್ಯಾಪಿ ಅನ್ವಯವಾಗುವಂತೆ:
• ಪ್ರತಿ ದಿನ ನೈಟ್‌ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಇರುತ್ತದೆ.
• ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
•ಬಸ್‌ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಿದೆ.