ಉಡುಪಿ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನವದೆಹಲಿ, ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣಗಳಲ್ಲಿ ಜುಲೈ 13 ರಂದು ರಾಷ್ಟ್ರೀಯ ಲೋಕ್ ಅದಾಲತ್ನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಲೋಕ್ ಅದಾಲತ್ ಮೂಲಕ ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಬಹುದಾಗಿದೆ.
ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೊಟಾರ್ ಅಪಘಾತ ಪರಿಹಾರ ನ್ಯಾಯಾಧಿಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ /ಕುಟುಂಬ ನ್ಯಾಯಾಲಯ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಜಿಲ್ಲಾ ನ್ಯಾಯಾಲಯದಲ್ಲಿ ಬಾಕಿ ಇರುವ ಕಂದಾಯ ಪ್ರಕೆರಣಗಳು ಹಾಗೂ ಸಿವಿಲ್ ಪ್ರಕರಣಗಳನ್ನು ರಾಜಿ ಮುಖಾಂತರ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದಾಗಿದೆ ಎಂದು ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.