ಲಾರಿ-ಕಾರು ಅಪಘಾತ: ಕಾರ್ಕಳ ನಕ್ರೆಯ ಐವರು ಗಂಭೀರ

ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ರಾತ್ರಿ ಉಪ್ಪಿನಂಗಡಿಯ ಕೂಟೇಲು ಸಮೀಪ ನಡೆದಿದೆ.

ಕಾರ್ಕಳದ ನಕ್ರೆ ಗ್ರಾಮದ ಕುಟುಂಬವೊಂದು ಸುಬ್ರಹ್ಮಣ್ಯಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಡುಗೆ ಅನಿಲ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಚಾಲಕ ದೀಪಕ್ (45), ಗುರುರಾಜ್ (46), ಧನುಷ್ (15), ಭಾರತಿ (48) ಹಾಗೂ ಗೀತಾ (55) ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತಕ್ಷಣ ರಕ್ಷಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಲಾರಿ ಚಾಲಕ ದಾಮೋದರ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಸಂಬಂಧ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.