ಬಿಜೆಪಿಯಲ್ಲಿ ದೊಡ್ಡ ಬದಲಾವಣೆ, ಕೇಂದ್ರದ ಹೊಸ ಟೀಂ ನ ಹಲವರಿಗೆ ಮಹತ್ವದ ಜವಾಬ್ದಾರಿ!

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನವೀನ್ ಅಧಿಕಾರ ವಹಿಸಿಕೊಂಡು ಸುಮಾರು ಎಂಟು ತಿಂಗಳು ಕಳೆದಿದ್ದು, ಇದೀಗ ತಮ್ಮ ಹೊಸ ತಂಡವನ್ನು ರಚಿಸಲು ಸಜ್ಜಾಗಿದ್ದಾರೆ. ಮಾಜಿ ಕೇಂದ್ರ ಸಚಿವರಾದ ಸ್ಮೃತಿ ಇರಾನಿ ಮತ್ತು ಅನುರಾಗ್ ಠಾಕೂರ್ ಅವರಿಗೆ ಪಕ್ಷದ ರಾಷ್ಟ್ರೀಯ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ನಿತಿನ್ ತಂಡಕ್ಕೆ ಸ್ಮೃತಿ, ಅನುರಾಗ್?

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಈ ಹಿಂದೆ ಕಾರ್ಯನಿರ್ವಹಿಸಿದ್ದ ಸ್ಮೃತಿ ಇರಾನಿ ಹಾಗೂ ಅನುರಾಗ್ ಠಾಕೂರ್ ಅವರನ್ನು ಇದೀಗ ನೇರವಾಗಿ ಪಕ್ಷದ ರಾಷ್ಟ್ರೀಯ ಸಂಘಟನೆಗೆ ಕರೆತರುವ ಚರ್ಚೆ ನಡೆದಿದೆ ಎನ್ನಲಾಗಿದೆ.

ಇಬ್ಬರಿಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಥವಾ ಪ್ರಮುಖ ರಾಜ್ಯಗಳ ಉಸ್ತುವಾರಿ ಹುದ್ದೆ ನೀಡುವ ಸಾಧ್ಯತೆ ಇದೆ. ಮುಂಬರುವ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಸಂಘಟನೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಲು ಬಿಜೆಪಿ ನಿರ್ಧರಿಸಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಅವರಿಗೂ ಪ್ರಮುಖ ಸಂಘಟನಾ ಜವಾಬ್ದಾರಿ ನೀಡುವ ಸಾಧ್ಯತೆ ಇದೆ.

ಇವರೊಂದಿಗೆ ಹರೀಶ್ ದ್ವಿವೇದಿ ಮತ್ತು ವಿನೋದ್ ತಾವ್ಡೆ ಅವರನ್ನೂ ರಾಷ್ಟ್ರೀಯ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳಿಗೆ ಪರಿಗಣಿಸಲಾಗುತ್ತಿದೆ ಎನ್ನಲಾಗಿದೆ.

ರಾಘವ್ ಚಡ್ಡಾಗೆ ಮಹತ್ವದ ಜವಾಬ್ದಾರಿ?

ಆಮ್ ಆದ್ಮಿ ಪಕ್ಷದಿಂದ ಹೊರಬಂದು ಈ ವರ್ಷದ ಏಪ್ರಿಲ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾದ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರಿಗೂ ಪಕ್ಷದಲ್ಲಿ ಮಹತ್ವದ ಜವಾಬ್ದಾರಿ ನೀಡುವ ಸಾಧ್ಯತೆ ಇದೆ.

ಈಗಾಗಲೇ ಸಂಸತ್ತಿನಲ್ಲಿ ಅವರಿಗೆ ಪ್ರಮುಖ ಜವಾಬ್ದಾರಿ ನೀಡಲಾಗಿದೆ. ರಾಜ್ಯಸಭಾ ಸಭಾಪತಿಗಳು ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯ ಅರ್ಜಿಗಳ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಸಂಘಟನೆಯಲ್ಲೂ ಅವರಿಗೆ ಪ್ರಮುಖ ಹುದ್ದೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕ್ಯಾಬಿನೆಟ್‌ನಿಂದ ಸಂಘಟನೆಗೆ

ಮುಂಬರುವ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲೂ ಕೆಲವು ಬದಲಾವಣೆಗಳು ನಡೆಯುವ ಸಾಧ್ಯತೆ ಇದೆ. ಕೇಂದ್ರ ಸಚಿವ ಸಂಪುಟದಲ್ಲಿರುವ ಕೆಲವು ಹಿರಿಯ ನಾಯಕರನ್ನು ಪಕ್ಷದ ಸಂಘಟನಾ ಕಾರ್ಯಗಳಿಗೆ ನಿಯೋಜಿಸುವ ಚಿಂತನೆ ನಡೆದಿದೆ ಎನ್ನಲಾಗಿದೆ.

ಇದರ ಜೊತೆಗೆ ಸಂಘಟನೆಯಲ್ಲಿ ಯುವ ನಾಯಕರಿಗೆ ಹೆಚ್ಚಿನ ಅವಕಾಶ ನೀಡುವ ಉದ್ದೇಶದಿಂದ ಕೆಲವು ಯುವ ಸಂಸದರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡುವ ಸಾಧ್ಯತೆಯೂ ಇದೆ. ಈ ಮೂಲಕ ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ರಾಷ್ಟ್ರೀಯ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಸಿದ್ಧತೆ ನಡೆಸುತ್ತಿದೆ ಎನ್ನಲಾಗಿದೆ.