ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದ ಅರ್ಥಪೂರ್ಣ ಆಚರಣೆಗೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ: ಜಿಲ್ಲಾಮಟ್ಟದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಇದೇ ಡಿಸೆಂಬರ್ 3 ರಂದು ಆಚರಿಸಲಾಗುತ್ತಿದ್ದು, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ, ವ್ಯವಸ್ಥಿತಿ ರೀತಿಯಲ್ಲಿ ಆಚರಿಸಲು ಅಗತ್ಯವಿರುವ ಸಿದ್ಧತೆಯನ್ನು ಸಮರ್ಪಕವಾಗಿ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲಾಮಟ್ಟದಲ್ಲಿ ಡಿಸೆಂಬರ್ 3 ರಂದು ಬೆಳಗ್ಗೆ 10 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗುವುದು. ಸಭಾ ಕಾರ್ಯಕ್ರಮಕ್ಕೂ ಮುನ್ನ ವಿಶೇಷಚೇತನ ಮಕ್ಕಳು ಸಿದ್ಧಪಡಿಸಿರುವ ಕರಕುಶಲ ವಸ್ತುಗಳ ಪ್ರದರ್ಶನ ನಡೆಯಲಿದೆ ಎಂದ ಅವರು, ಸಮಾರಂಭದ ದಿನ ಹೆಚ್ಚಿನ ಸಂಖ್ಯೆಯಲ್ಲಿ ವಿಶೇಷ ಮಕ್ಕಳನ್ನು ಹಾಗೂ ವಿಕಲಚೇತನರನ್ನು ಕರೆತರುವಲ್ಲಿ ವಿಶೇಷ ಶಾಲೆಗಳ ಮುಖ್ಯಸ್ಥರು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರುಗಳು ಸೂಕ್ತ ಕ್ರಮವಹಿಸಬೇಕು ಎಂದರು.

ವಿಕಲಚೇತನರಿಗೆ ಕ್ರೀಡಾಕೂಟ ಆಯೋಜಿಸಿ, ವಿಜೇತರುಗಳಿಗೆ ಜಿಲ್ಲಾ ಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಬೇಕು ಎಂದ ಅವರು, ಕಾರ್ಯಕ್ರಮದ ದಿನದಂದು ವಿಕಲಚೇತನರು ಸಾಂಸ್ಕೃತಿಕ ಸ್ಪರ್ಧೆಗಳ ಪ್ರದರ್ಶನ ನೀಡುವಂತೆ ಕ್ರಮವಹಿಸಬೇಕು ಎಂದರು.

ಕಾರ್ಯಕ್ರಮದ ದಿನದಂದು ಶುದ್ಧ ಕುಡಿಯುವ ನೀರು ಒದಗಿಸಲು ಹಾಗೂ ಸ್ವಚ್ಛತೆಗೆ ಒತ್ತು ನೀಡಬೇಕು. ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ, ಗಣ್ಯರನ್ನು, ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ವೇದಿಕೆ ಕಾರ್ಯಕ್ರಮಕ್ಕೆ ಪೂರಕವಾಗಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.

ಇದೇ ಸಂದರ್ಭದಲ್ಲಿ ವಿಶೇಷ ಸಾಧನೆ ಮಾಡಿದ ವಿಶೇಷಚೇತನರನ್ನು ಗೌರವಿಸಿ, ಸನ್ಮಾನಿಸಲಾಗುವುದು ಎಂದ ಅವರು, ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ವಿಕಲಚೇತನರು ಹಾಗೂ ಸಾರ್ವಜನಿಕರು ಪಾಲ್ಗೊಳ್ಳುವಂತೆ ವ್ಯಾಪಕ ಪ್ರಚಾರ ನೀಡುವುದರೊಂದಿಗೆ ಕಾರ್ಯಕ್ರಮ ಯಶಸ್ವಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.

ನವೆಂಬರ್ ಮಾಹೆಯ ಅಂತ್ಯದಲ್ಲಿ 21 ಬಗೆಯ ಅಂಗವಿಕಲತೆಯೆ ಬಗ್ಗೆ ಅರಿವು ಮೂಡಿಸಲು ಜಿಲ್ಲಾ ಡಿ.ಡಿ.ಆರ್.ಸಿ ಕೇಂದ್ರ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂಸೇವಾ ಸಂಸ್ಥೆ ಹಾಗೂ ಎಂ.ಆರ್.ಡಬ್ಲೂö್ಯ ರವರ ಸಹಯೋಗದೊಂದಿಗೆ ವಿಕಲಚೇತನರ ಸಪ್ತಾಹವನ್ನು ಆಚರಿಸಲಾಗುತ್ತಿದ್ದು, ಈ ವೇಳೆ ವಿಶೇಷಚೇತನರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಹೆಚ್ಚಿನ ಅರಿವು ಮೂಡಿಸುವಲ್ಲಿ ವಿಶೇಷ ಕ್ರಮ ವಹಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಕೆ, ವಿಕಲಚೇತನರ ಸ್ವಯಂಸೇವಾ ಸಂಸ್ಥೆಗಳ ಹಾಗೂ ಪುನರ್ವಸತಿ ಕೇಂದ್ರಗಳ ಮುಖ್ಯಸ್ಥರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.