ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿ ಕಣ್ಮರೆಯಾಗಿರುವ ಏಳು ಮಂದಿ ಮೀನುಗಾರರ ರಕ್ಷಣಾ ಕಾರ್ಯಾಚರಣೆಯಲ್ಲಿ ಕರ್ನಾಟಕದ ನೆರೆ ರಾಜ್ಯಗಳು ಕೂಡ ತೊಡಗಿಸಿಕೊಳ್ಳಬೇಕೆಂದು ಕೇಂದ್ರದ ಗೃಹ ಸಚಿವಾಲಯ ಸೂಚನೆ ನೀಡಿದೆ.
ನಾಪತ್ತೆಯಾಗಿರುವ ಮೀನುಗಾರರ ಪತ್ತೆ ಕಾರ್ಯ ಸೂಕ್ತ ರೀತಿಯಲ್ಲಿ ಸಹಕಾರ ನೀಡುವಂತೆ ಉಡುಪಿ ಶಾಸಕ ಕೆ. ರಘುಪತಿ ಭಟ್ ನೇತೃತ್ವದಲ್ಲಿ ಮೀನುಗಾರರ ಮುಖಂಡರು ದೆಹಲಿಗೆ ತೆರಳಿ
ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಇದಕ್ಕೆ ಸೂಕ್ತ ರೀತಿಯಲ್ಲಿ ಸ್ಪಂದಿಸಿರುವ ಕೇಂದ್ರ ಗೃಹ ಸಚಿವಾಲಯವು ತನ್ನ ಅಧೀನದಲ್ಲಿ ಬರುವ ಎಲ್ಲಾ ಇಲಾಖೆಗಳು ಪತ್ತೆ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಸೂಚನೆ ನೀಡಿದೆ. ಅಲ್ಲದೆ, ಕರ್ನಾಟಕದ ಅಕ್ಕಪಕ್ಕದ ರಾಜ್ಯಗಳು ಕೂಡ ರಕ್ಷಣಾ ಕಾರ್ಯದಲ್ಲಿ ನೆರವಾಗಬೇಕು ಎಂದು ತಿಳಿಸಿದೆ.