ಮಂಗಳೂರು: ಮಹಾಮಾರಿ ಡೆಂಗಿ ವ್ಯಾಪಕವಾಗಿ ಹರಡಿರುವುದರಿಂದ ಶಿಕ್ಷಣ ಸಂಸ್ಥೆಗಳು ಮೂರು ದಿನದೊಳಗೆ ತಮ್ಮ ಶಾಲಾ ವ್ಯಾಪ್ತಿಯಲ್ಲಿ ಲಾರ್ವ ನಾಶ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಶಿಕ್ಷಣ ಸಂಸ್ಥೆಗಳಲ್ಲಿ ಡೆಂಗ್ಯು ನಿವಾರಣೆಗಾಗಿ ಮಂಗಳೂರಿನ ಶಿಕ್ಷಣ ಸಂಸ್ಥೆಗಳ ಮುಖ್ಯೋಪಾಧ್ಯಾಯರು, ಪ್ರಾಂಶುಪಾಲರ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೆಲವು ಸೊಳ್ಳೆ ಉತ್ಪತ್ತಿಯಾಗಿ ವಿದ್ಯಾರ್ಥಿಗಳ ಕಚ್ಚುತ್ತಿರುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಡೆಂಗ್ಯೂ ಕಾಣಿಸಿಕೊಳ್ಳುತ್ತದೆ. ಹಾಗಾಗಿ ಮೂರು ದಿನದ ಬಳಿಕ ಶಿಕ್ಷಣ ಸಂಸ್ಥೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಲಾಗುವುದು.
ಒಂದು ವೇಳೆ ಲಾರ್ವ ಪತ್ತೆಯಾದರೆ ಅಂತಹ ಶಿಕ್ಷಣ ಸಂಸ್ಥೆ ಹೆಸರನ್ನು ಬಹಿರಂಗಪಡಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಎಚ್ಚರಿಕೆ ನೀಡಿದರು.