ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳಿಗೆ ನಡೆಯುತ್ತಿರುವ ಚುನಾವಣೆ ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್, ಮಾಜಿ ಶಾಸಕ ಜೆ.ಆರ್.ಲೋಬೋ ಸೇರಿದಂತೆ ಅನೇಕ ಗಣ್ಯರು ಬೆಳಗ್ಗೆಯೇ ತಮ್ಮ ವಾರ್ಡ್ ವ್ಯಾಪ್ತಿಯಲ್ಲಿ ಮತಗಟ್ಟೆಗಳಲ್ಲಿ ಹಕ್ಕು ಚಲಾಯಿಸಿದರು.
ಮಿಲಾಗ್ರಿಸ್ ಶಾಲೆಯ 40ನೇ ಬೂತ್ ನಲ್ಲಿ 20ಕ್ಕೂ ಅಧಿಕ ಮಂಗಳಮುಖಿಯರು ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿದರು.
ಅನಾರೋಗ್ಯಕ್ಕೀಡಾಗಿರುವ ಉದ್ಯಮಿ ಸುಧೀರ್ ಘಾಟೆ ಮೂಗಿಗೆ ಆಕ್ಸಿಜನ್ ಪೈಪ್ ಅಳವಡಿಸಿಕೊಂಡೇ ಮತದಾನ ಮಾಡಿ ಗಮನಸೆಳೆದರು. ಅನಾರೋಗ್ಯದಿಂದ ಬಳಲುತ್ತಿರುವ ಅವರು ಕೊಡಿಯಲ್ ಬೈಲ್ ಜಿಲ್ಲಾ ಶಿಕ್ಷಕರ ತರಬೇತಿ ಕೇಂದ್ರದ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.
ಮಾತಿನ ಚಕಮಕಿ:
ಫಳ್ನೀರ್ ವಾರ್ಡಿನ ಜೆಪ್ಪು ಮತಗಟ್ಟೆಯ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಮತಗಟ್ಟೆಯ ಬಳಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಮತದಾರರನ್ನು ಒತ್ತಾಯಿಸುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ. ಚುನಾಯಿತ ಪ್ರತಿನಿಧಿಗಳು ಮತಗಟ್ಟೆ ಬಳಿ ಹಾಜರಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು ಐವನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದು ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ತೀವ್ರ ಮಾತಿನ ಚಕಮಕಿಗೆ ಕಾರಣವಾಯಿತು.