ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದಲ್ಲಿ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಿನ್ನೆ ಅಧಿಕಾರಿಗಳ ಸಭೆ ನಡೆಯಿತು.
ಈ ಕುರಿತು ಪ್ರತಿಕ್ರಯಿಸಿರುವ ಶಾಸಕರು, ಮಂಗಳೂರಿನಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ವಿವಿಧ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಹಾಗೂ ಮಂಗಳೂರು ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಯ 6 ಕುದ್ರುಗಳನ್ನು ಪ್ರವಾಸೋದ್ಯಮಕ್ಕೆ ಪೂರಕವಾಗಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ ಎಂದರು.
ಕಂದಾಯ ಇಲಾಖೆಯಡಿ 3 ಕುದ್ರು ಹಾಗೂ ಬಂದರು ಇಲಾಖೆಯಡಿ 3 ಕುದ್ರುಗಳಿದ್ದು ಇವುಗಳನ್ನು ಅಭಿವೃದ್ಧಿಗೊಳಿಸಲು ಯೋಜನೆ ರೂಪಿಸಲಾಗುತ್ತಿದೆ. ಕುದ್ರುಗಳ ಅಭಿವೃದ್ಧಿಗೊಳಿಸಲು ಬೇಕಿರುವ ಜಾಗದ ಸರ್ವೆ ನಡೆಸಿ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.
ಕಂದಾಯ ಇಲಾಖೆ ಹಾಗೂ ಬಂದರು ಇಲಾಖೆಯ ಅಧೀನಕ್ಕೊಳಪಟ್ಟಿರುವ ಜಾಗವನ್ನು ಅಭಿವೃದ್ಧಿಪಡಿಸಲು ಪ್ರವಾಸೋದ್ಯಮ ಇಲಾಖೆಗೆ ಕರಾರು ಪ್ರಸ್ತಾವನೆ ಸಲ್ಲಿಸಲು ತಿಳಿಸಲಾಗಿದೆ. ಸುಲ್ತಾನ್ ಬತ್ತೇರಿಯಿಂದ ಕಣ್ಣೂರು ವರೆಗಿನ ಜೆಟ್ಟಿಗಳನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗುವುದು ಎಂದು ಶಾಸಕರು ತಿಳಿಸಿದ್ದಾರೆ.
ಮಂಗಳೂರು ನಗರ ವ್ಯಾಪ್ತಿಯಲ್ಲಿ 6 ಕುದ್ರುಗಳ ಅಭಿವೃದ್ಧಿಯ ರೂಪುರೇಷೆ ಸಿದ್ಧಪಡಿಸಲಾಗಿದ್ದು ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ಪ್ರವಾಸೋದ್ಯಮ ತಾಣವನ್ನಾಗಿ ಪರಿವರ್ತಿಸುವ ಉದ್ಧೇಶ ನಮ್ಮದಾಗಿದೆ. ಪ್ರವಾಸೋದ್ಯಮದಲ್ಲಿ ಮಂಗಳೂರನ್ನು ವಿಶ್ವಮಟ್ಟಕ್ಕೇರಿಸುವುದು ನಮ್ಮ ಗುರಿಯಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.