ಮಂಗಳೂರು: ನಾಳೆಯಿಂದ ದ.ಕ. ಜಿಲ್ಲೆ ಸಂಪೂರ್ಣ ಬಂದ್ 

ಮಂಗಳೂರು: ಮಾರ್ಚ್ 28ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಗಳನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು ಎಂದು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 7 ಪ್ರಕರಣಗಳು ವರದಿಯಾಗಿವೆ. ನೆರೆಯ ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಕರೋನಾ ಪಾಸಿಟಿವ್ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿವೆ. ಜಿಲ್ಲೆಯಲ್ಲಿ ಸಾರ್ವಜನಿಕ ಓಡಾಟ ನಿರ್ಬಂದಿಸದಿದ್ದರೆ, ಮುಂದಿನ ದಿನಗಳು ಇನ್ನಷ್ಟು ಅಪಾಯಕಾರಿಯಾಗಿವೆ. ಜನರ ಉತ್ತಮ ಭವಿಷ್ಯಕ್ಕಾಗಿ ಕೈಗೊಳ್ಳುವ ಈ ನಿರ್ಧಾರವನ್ನು ಎಲ್ಲರೂ ಬೆಂಬಲಿಸಬೇಕು. ಸಾರ್ವಜನಿಕರ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರವನ್ನು ಅನಿವಾರ್ಯವಾಗಿ ತೆಗೆದುಕೊಳ್ಳಬೇಕಿದೆ. ಪ್ರತಿಯೊಬ್ಬರೂ ಮನೆಯೊಳಗೆ ಕೂತು, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪ್ರಧಾನಮಂತ್ರಿ, ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಚಟುವಟಿಕೆ, ವಾಣಿಜ್ಯ ವ್ಯವಹಾರಗಳನ್ನು, ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಸಭೆಯಲ್ಲಿ ತೀರ್ಮಾನ ಮಾಡಲಾಯಿತು.