ಮಂಗಳೂರು: ಪ್ರಜಾಪ್ರಭುತ್ವ ಬಲಗೊಳಿಸುವಲ್ಲಿ ಮತ್ತು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಪತ್ರಕರ್ತರ ಪಾತ್ರ ಹಿರಿದಾದುದು ಎಂದು ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ.ಆಚಾರ್ಯ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸೋಮವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾಮಾಜಿಕ ಮತ್ತು ಶೈಕ್ಷಣಿಕ ಕೊಡುಗೆ ನೀಡುವ ಮೂಲಕ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜನರು ಬಲು ದೊಡ್ಡ ಕೊಡುಗೆಯನ್ನು ನೀಡಿದ್ದಾರೆ. ಪತ್ರಕರ್ತರು ಸೇರಿದಂತೆ ದೇಶದ ಅಭಿವೃದ್ಧಿಗೆ ಇಲ್ಲಿನ ಜನರು ಕೈಜೋಡಿಸಿದ್ದಾರೆ. ಮಾಧ್ಯಮಗಳು ಈಶಾನ್ಯ ರಾಜ್ಯಗಳ ಅಭಿವೃದ್ಧಿಗೂ ಗಮನ ಹರಿಸಬೇಕಾಗಿದೆ. ಈ ರಾಜ್ಯಗಳಲ್ಲಿರುವ ಅಪಾರ ಸಂಪನ್ಮೂಲಗಳನ್ನು ಬಳಸಿ ಆ ರಾಜ್ಯಗಳ ಆರ್ಥಿಕ ಅಭಿವೃದ್ಧಿಗೆ ಮತ್ತು ದೇಶದ ಬೆಳವಣಿಗೆಗೆ ಬಳಸುವ ಪ್ರಯತ್ನ ನಡೆಸಬೇಕಾಗಿದೆ ಎಂದರು.
ಪತ್ರಕರ್ತರಿಗೆ ನಿವೇಶನ ನೀಡಲು ಸೂಚನೆ: ಸಚಿವ ಖಾದರ್
ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ನಿವೇಶನ ನೀಡಬೇಕು ಎಂಬ ನೆಲೆಯಲ್ಲಿ ಹಲವು ಸುತ್ತಿನ ಮಾತುಕತೆ ನಡೆಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟದಲ್ಲಿ ಸ್ಥಳ ಗುರುತಿಸಿ ಪತ್ರಕರ್ತರಿಗೆ ನೀಡಲು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮತ್ತು ತಹಶಿಲ್ದಾರ್ ಗಳಿಗೆ ಆದೇಶ ನೀಡಲಾಗಿದೆ ಎಂದು ಮುಖ್ಯ ಅತಿಥಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು.
ಪತ್ರಿಕೆಗಳನ್ನು ಓದುವಾಗ ಅದು ಜನರಿಗೆ ಟೆನ್ಷನ್ ಸೃಷ್ಠಿಸುವಂತೆ ಇರಬಾರದು. ಬದಲಾಗಿ ಜನರ ಟೆನ್ಷನ್ ಹೋಗಲಾಡಿಸುವಂತೆ ಇರಬೇಕು. ಅದಕ್ಕಾಗಿ ಧನಾತ್ಮಕ ಸುದ್ದಿಗಳು ವೈಭವೀಕರಣವಾಗಬೇಕು ಮನಸ್ಸು, ಹೃದಯ ಮತ್ತು ಸಮಾಜವು ಸ್ವಚ್ಛವಾಗಿರುವಂತೆ ನೋಡಿಕೊಳ್ಳುವ ದೊಡ್ಡ ಜವಾಬ್ದಾರಿ ಪತ್ರಕರ್ತರ ಮೇಲೆ ಇದೆ. ಹಿರಿಯರ ಕಲ್ಪನೆಯ ನಾಡನ್ನು ಕಟ್ಟಲು ಮತ್ತು ನಮ್ಮ ಹಿರಿಮೆಯನ್ನು ಎತ್ತಿ ಹಿಡಿಯಲು ಪತ್ರಕರ್ತರು ಮುಂಚೂಣಿಯಲ್ಲಿರಬೇಕು ಎಂದರು.
ಸಮ್ಮೇಳನ ಸ್ಮರಣ ಸಂಚಿಕೆ
‘ಸಮಾಚಾರ’ ಬಿಡುಗಡೆ ಮಾಡಿ ಮಾತನಾಡಿದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಸಂವಿಧಾನದ ಪ್ರಮುಖ ಅಂಗವಾದ ಪತ್ರಿಕಾರಂಗ ಸಮಾಜದ ಏಳಿಗೆಗೆ ನಿರಂತರ ಪ್ರಯತ್ನ ನಡೆಸುತಿದೆ. ಆಡಳಿತ ಯಂತ್ರವನ್ನು ಎಚ್ಚರಿಸಿ ಜನರ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಪತ್ರಕರ್ತರು ಯೋಧರಂತೆ ಕೆಲಸ ಮಾಡುತ್ತಾರೆ ಎಂದು ಹೇಳಿದರು.
ಬ್ರ್ಯಾಂಡ್ ಮಂಗಳೂರು, ಗ್ರಾಮ ವಾಸ್ತವ್ಯ ಎಂಬುದು ದೊಡ್ಡ ಕಲ್ಪನೆ. ಬ್ರ್ಯಾಂಡ್ ಮಂಗಳೂರು ಕುರಿತು ಎಲ್ಲರಲ್ಲೂ ಕೆಲವೊಂದು ಕಲ್ಪನೆಗಳಿವೆ. ಅದರ ಸಾಕಾರಕ್ಕೆ ಪೂರ್ಣ ಸಹಕಾರ ನೀಡುವುದಾಗಿ ಹೇಳಿದರು.
ಗಿಡಗಳನ್ನು ವಿತರಿಸುವ ಮೂಲಕ ‘ಹಸಿರು ಉಸಿರು’ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ.ಭರತ್ ಶೆಟ್ಟಿ ಪ್ರಜಾಪ್ರಭುತ್ವದ ಬೆಳವಣಿಗೆಗೆ ಪತ್ರಿಕಾ ಕ್ಷೇತ್ರದ ಜವಾಬ್ದಾರಿ ದೊಡ್ಡದಿದೆ. ನಾಡನ್ನು ಪ್ಲಾಸ್ಟಿಕ್ ಮುಕ್ತಮಾಡುವ ಮತ್ತು ಹಸಿರು ಪರಿಸರವನ್ನು ಸೃಷ್ಠಿಸುವ ಕೆಲಸಕ್ಕೆ ಎಲ್ಲರೂ ಕೈ ಜೋಡಿಸಬೇಕಾಗಿದೆ ಎಂದರು.
ಮುಖ್ಯ ಅತಿಥಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ ಪತ್ರಕರ್ತರಿಗೆ ಉಚಿತ ಆರೋಗ್ಯ ಸೇವೆ ನೀಡುವ ಹೆಲ್ತ್ ಕಾರ್ಡ್ ಸದ್ಯದಲ್ಲಿಯೇ ಬಿಡುಗಡೆ ಆಗಲಿದೆ ಎಂದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಪ್ರಸ್ತಾವನೆಗೈದರು.
ಹಿರಿಯ ಪತ್ರಕರ್ತ ಈಶ್ವರ ದೈತೋಟ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಕವಿತಾ ಪಿ.ಬಿ.ಆಚಾರ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್,
ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ, ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ಉಪಸ್ಥಿತರಿದ್ದರು.
ಸಮ್ಮೇಳನದ ಸಂಚಾಲಕ ಹಾಗು ರಾಜ್ಯ ಕಾರ್ಯಕಾರಿಣಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಸ್ವಾಗತಿಸಿ, ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು.
ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
ಕುತ್ಲೂರು ಶಾಲೆಗೆ ಕಂಪ್ಯೂಟರ್ ಕೊಡುಗೆ:
ಪತ್ರಕರ್ತರ ಸಂಘದ ವತಿಯಿಂದ ಕಳೆದ ಡಿಸೆಂಬರ್ ತಿಂಗಳಲ್ಲಿ ಗ್ರಾಮ ವಾಸ್ತವ್ಯ ನಡೆಸಿದ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆಗೆ ಮಂಗಳೂರು ವಿಶೇಷ ಆರ್ಥಿಕ ವಲಯದ ವತಿಯಿಂದ ನೀಡಿದ ಕಂಪ್ಯೂಟರ್ ನ ದಾಖಲೆಗಳನ್ನು ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ.ಆಚಾರ್ಯ ಕುತ್ಲೂರು ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು. ಎಂಎಸ್ಇಝಡ್ ನ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಮಚಂದ್ರ ಭಂಡಾರ್ಕರ್ ಉಪಸ್ಥಿತರಿದ್ದರು.