ಮಂಗಳೂರು: ಬೀಚ್ ಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ

ಮಂಗಳೂರು: ರಾಜ್ಯದಲ್ಲಿ ರೂಪಾಂತರ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಹಾಗೂ ಸೋಂಕು ಹರಡುವುದನ್ನು ತಡೆಕಟ್ಟುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರುವ ಎಲ್ಲಾ ಕಡಲ ಕಿನಾರೆ (ಬೀಚ್) ಗಳಿಗೆ ಡಿಸೆಂಬರ್ 31ರ ಮಧ್ಯಾಹ್ನ 12 ಗಂಟೆಯಿಂದ ಜನವರಿ 2ರ ಮಧ್ಯಾಹ್ನ 12 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಸ್ಥಳೀಯ ಹಾಗೂ ಸಾಂಪ್ರದಾಯಿಕ ಮೀನುಗಾರರಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ.
ಕಡಲ ತೀರ ಪ್ರದೇಶಗಳಲ್ಲಿ ಅತೀ ಹೆಚ್ಚು ಜನಸಂದಣಿ ಸೇರುವುದರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ಣ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಬೀಚ್‍ಗಳಿಗೆ ಮೀನುಗಾರರನ್ನು ಹೊರತುಪಡಿಸಿ ಪ್ರವಾಸಿಗರು ಹಾಗೂ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.