ಮಂಗಳೂರು: ಹಿಂದೂ ಕಾರ್ಯಕರ್ತನ ಭೀಕರ ಹತ್ಯೆ.

ಮಂಗಳೂರು: ಬಜಪೆಯ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿದೆ.

ಸುಹಾಸ್ ಶೆಟ್ಟಿ ಕೊಲೆಯಾದ ಕಾರ್ಯಕರ್ತ. ಸುರತ್ಕಲ್‌ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ರಾತ್ರಿ ಹೊಂಚು ಹಾಕಿ ನಾಲ್ವರು ತಲವಾರಿನಿಂದ ಹತ್ಯೆ ಮಾಡಿದ್ದಾರೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಸುರತ್ಕಲ್‌ನಲ್ಲಿ ಫಾಜಿಲ್ ಹತ್ಯೆ ನಡೆದಿತ್ತು. ಈ ಹತ್ಯೆ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಮತ್ತು ಇತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಈ ಹಿಂದೆ ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯನಾಗಿದ್ದ ಸುಹಾಸ್‌ ಶೆಟ್ಟಿಗೆ ಜೈಲಿನಿಂದ ಹೊರ ಬಂದ ನಂತರ ಯಾವುದೇ ಜವಾಬ್ದಾರಿ ಇರಲಿಲ್ಲ.

ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಸುಹಾಸ್‌ ಶೆಟ್ಟಿಯನ್ನು ಸ್ಥಳೀಯರು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸುಹಾಸ್‌ ಶೆಟ್ಟಿ ಮೃತಪಟ್ಟಿದ್ದು ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಸೇರಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆ ಎದುರು ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಆಸ್ಪತ್ರೆಗೆ ಆಗಮಿಸಿದ ಮಾಜಿ‌ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಡಾ.ವೈ. ಭರತ್ ಶೆಟ್ಟಿ ಆಗಮಿಸಿದ್ದಾರೆ.

ಹಲವು ಕೊಲೆ ಯತ್ನ ಪ್ರಕರಣದ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿಯನ್ನು ಹತ್ಯೆ ಮಾಡುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಫಾಝಿಲ್‌ ಹತ್ಯೆಗೆ ಪ್ರತಿಯಾಗಿ ಈ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಪೊಲೀಸರು ಆರೋಪಿಗಳ ಬಂಧನಕ್ಕೆ ಈಗ ಬಲೆ ಬೀಸಿದ್ದಾರೆ.