ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ತೃತೀಯ ಲಿಂಗಿಗಳು ತೊಂದರೆ ನೀಡುತ್ತಿರುವ ಕುರಿತು ದೂರು: ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿಂತು ವಾಹನ ಸವಾರರಿಗೆ ತೊಂದರೆ ನೀಡುವ ಹಾಗೂ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ, ಅಗತ್ಯ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೊದಲು ಅರಿವು, ಬಳಿಕ ಕಾನೂನು ಕ್ರಮ

ರಾಷ್ಟ್ರೀಯ ಹೆದ್ದಾರಿಗಳ ಬದಿಯಲ್ಲಿ ರಾತ್ರಿ ವೇಳೆ ನಿಂತು ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಕಿರಿಕಿರಿ ಉಂಟುಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ, ಮೊದಲ ಹಂತದಲ್ಲಿ ಸಂಬಂಧಪಟ್ಟವರಿಗೆ ಅರಿವು ಮೂಡಿಸಿ ಹೆದ್ದಾರಿಗಳಲ್ಲಿ ನಿಲ್ಲದಂತೆ ತಿಳಿಹೇಳಬೇಕು. ಇದಾದ ಬಳಿಕವೂ ಸಮಸ್ಯೆ ಮುಂದುವರಿದರೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಪೊಲೀಸರಿಗೆ ಸೂಚಿಸಿದರು.

ಹೊರರಾಜ್ಯದವರಿಂದ ಅಕ್ರಮ ಚಟುವಟಿಕೆ ಆರೋಪ

ಸಭೆಯಲ್ಲಿ ಭಾಗವಹಿಸಿದ್ದ ಸ್ಥಳೀಯ ಮಂಗಳಮುಖಿ ಸಂಘಟನೆಗಳ ಮುಖಂಡರು, ಹೊರರಾಜ್ಯಗಳಿಂದ ನಗರಕ್ಕೆ ಆಗಮಿಸುವ ಕೆಲವರು ಅನೈತಿಕ ಹಾಗೂ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಿರುವುದರಿಂದ ಸ್ಥಳೀಯ ಸಮುದಾಯಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಆರೋಪಿಸಿದರು. ಇಂತಹವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

96 ಲಿಂಗತ್ವ ಅಲ್ಪಸಂಖ್ಯಾತರ ನೋಂದಣಿ

ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಪುನರ್ವಸತಿಗಾಗಿ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ವಸತಿ ಸೌಲಭ್ಯವಿಲ್ಲದ 15 ಮಂದಿಯ ಪಟ್ಟಿಯನ್ನು ಮಂಗಳೂರು ಮಹಾನಗರ ಪಾಲಿಕೆಗೆ ಸಲ್ಲಿಸಲಾಗಿದೆ. ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಪ್ರೋತ್ಸಾಹಧನ ಒದಗಿಸುವ ಸಿದ್ಧತೆ ನಡೆಯುತ್ತಿದೆ ಎಂದು ತಿಳಿಸಿದರು.

ಇತ್ತೀಚಿನ ಸಮೀಕ್ಷೆಯ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 96 ಮಂದಿ ಲಿಂಗತ್ವ ಅಲ್ಪಸಂಖ್ಯಾತರು ನೋಂದಾಯಿಸಿಕೊಂಡಿದ್ದಾರೆ. ಅವರ ಸಮಗ್ರ ಪುನರ್ವಸತಿಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ್, ಮಂಗಳಮುಖಿಯರ ಸಂಘಟನೆಗಳ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.