ಮಂಗಳೂರು: ನಗರದ ಕಣಚೂರು ಮೆಡಿಕಲ್ ಕಾಲೇಜು ಆವರಣದಿಂದ ಹಾಡಹಗಲೇ ಸಿನಿಮೀಯ ರೀತಿಯಲ್ಲಿ ಅಪಹರಣಕ್ಕೊಳಗಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಂಗಳೂರು ಪೊಲೀಸರು ಕೇರಳದಲ್ಲಿ ಪತ್ತೆಹಚ್ಚಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಬೇರೆ ಧರ್ಮದ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಕುಟುಂಬಸ್ಥರೇ ಆಕೆಯನ್ನು ಬಲವಂತವಾಗಿ ಕರೆದೊಯ್ದಿದ್ದರು ಎನ್ನಲಾಗಿದೆ. ಇದೀಗ ರಕ್ಷಿಸಲ್ಪಟ್ಟ ವಿದ್ಯಾರ್ಥಿನಿ, “ನನಗೆ ಹೆತ್ತವರೇ ಬೇಡ, ಅವರೊಂದಿಗೆ ಹೋಗುವುದಿಲ್ಲ” ಎಂದು ಪೊಲೀಸರ ಮುಂದೆ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರಿನ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿ ಹಾಗೂ ಬಾಗಲಕೋಟೆ ಮೂಲದ ಹಿಂದೂ ಯುವಕ ಪರಸ್ಪರ ಪ್ರೀತಿಸುತ್ತಿದ್ದರು. ಈ ಯುವಕ ಮಂಗಳೂರಿನ ಕಾಲೇಜೊಂದರಲ್ಲಿ ಡೆಂಟಲ್ ವ್ಯಾಸಂಗ ಮಾಡುತ್ತಿದ್ದಾನೆ ಎನ್ನಲಾಗಿದೆ.
ಇವರ ಪ್ರೀತಿಗೆ ಯುವತಿಯ ಕುಟುಂಬಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದೇ ಕಾರಣಕ್ಕೆ ಕಾಲೇಜು ಆವರಣಕ್ಕೆ ನುಗ್ಗಿದ್ದ ಕುಟುಂಬಸ್ಥರು, ಕೆಲವರ ಸಹಾಯದಿಂದ ವಿದ್ಯಾರ್ಥಿನಿಯನ್ನು ಬಲವಂತವಾಗಿ ಎಳೆದೊಯ್ದು ಥಾರ್ ಜೀಪ್ನಲ್ಲಿ ಅಪಹರಿಸಿದ್ದರು. ಈ ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದವು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮಂಗಳೂರು ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ಆರಂಭಿಸಿದ್ದರು. ತನಿಖೆಯ ವೇಳೆ ವಿದ್ಯಾರ್ಥಿನಿ ಕೇರಳದಲ್ಲಿರುವ ಸಂಬಂಧಿಕರ ಮನೆಯಲ್ಲಿ ಇರುವುದು ಪತ್ತೆಯಾಗಿದ್ದು, ನಿನ್ನೆ ರಾತ್ರಿ ಪೊಲೀಸರು ಆಕೆಯನ್ನು ರಕ್ಷಿಸಿ ಮಂಗಳೂರಿಗೆ ಕರೆತಂದಿದ್ದಾರೆ.
ಪೊಲೀಸರ ಮುಂದೆ ಹೇಳಿಕೆ ನೀಡಿರುವ ವಿದ್ಯಾರ್ಥಿನಿ, ಪೋಷಕರೊಂದಿಗೆ ತೆರಳಲು ನಿರಾಕರಿಸಿದ್ದಾಳೆ. ಬಳಿಕ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಸದ್ಯ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ.
ವಿದ್ಯಾರ್ಥಿನಿ ಪ್ರೀತಿಸುತ್ತಿದ್ದ ಬಾಗಲಕೋಟೆ ಮೂಲದ ಡೆಂಟಲ್ ವಿದ್ಯಾರ್ಥಿಯನ್ನು ಪೊಲೀಸರು ಇಂದು ಸಾಂತ್ವನ ಕೇಂದ್ರಕ್ಕೆ ಕರೆಸುವ ಸಾಧ್ಯತೆಯಿದೆ. ಇಬ್ಬರೊಂದಿಗೂ ಮಾತುಕತೆ ನಡೆಸಿ, ವಯಸ್ಕಳಾಗಿರುವ ವಿದ್ಯಾರ್ಥಿನಿಯ ಇಚ್ಛೆಯಂತೆ ಮುಂದಿನ ಕ್ರಮ ಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.
ಇಬ್ಬರು ಸಂಬಂಧಿಕರ ವಿರುದ್ಧ ಅಪಹರಣ ಪ್ರಕರಣ
ವಿದ್ಯಾರ್ಥಿನಿಯನ್ನು ಬಲವಂತವಾಗಿ ಕರೆದೊಯ್ದ ಆರೋಪದ ಮೇಲೆ ಆಕೆಯ ಇಬ್ಬರು ಸಂಬಂಧಿಕರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಯುವತಿ ವಯಸ್ಕಳಾಗಿದ್ದು, ತಾನು ಎಲ್ಲಿ ಮತ್ತು ಯಾರೊಂದಿಗೆ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಸಂಪೂರ್ಣ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ತಿಳಿಸಿದ್ದರು. ಕುಟುಂಬಸ್ಥರೇ ಆಗಿದ್ದರೂ ಬಲವಂತವಾಗಿ ಕರೆದೊಯ್ಯುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧ ಎಂದು ಅವರು ಸ್ಪಷ್ಟಪಡಿಸಿದ್ದರು.















