ಮಣಿಪಾಲ: ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಇಂದಿನಿಂದ ಕೋವಿಡ್ -19 ರ ಪರೀಕ್ಷೆ ಆರಂಭಿಸಲಾಗಿದೆ ಎಂದು ಆಸ್ಪತ್ರೆಯವ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ತಿಳಿಸಿದ್ದಾರೆ.
ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಗೆ “ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐ ಸಿ ಎಂ ಆರ್)”ಯಿಂದ ಕೋವಿಡ್ 19 ಪರೀಕ್ಷೆಗೆ ಅನುಮೋದನೆ ದೊರೆತಿದೆ. ಇದರಿಂದ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಪ್ರಯೋಗಾಲಯವು ಉಡುಪಿ ಜಿಲ್ಲೆಯಲ್ಲಿ ಸರಕಾರಿ ಅಥವಾ ಖಾಸಗಿ ವಲಯದಲ್ಲಿ ಕೋವಿಡ್ 19 ಪರೀಕ್ಷೆಗೆ ಅನುಮೋದನೆ ಪಡೆದ ಮೊದಲ ಆಸ್ಪತ್ರೆಯಾಗಿದೆ ಎಂದಿದ್ದಾರೆ.
ಹೊಸ ಪರೀಕ್ಷಾ ಸೌಲಭ್ಯದ ಅನುಮೋದನೆಯು ಕೋವಿಡ್ 19 ಪರೀಕ್ಷೆಗಳ ತ್ವರಿತ ವರದಿಗಳನ್ನು ಪಡೆಯಲು ಸಹಾಯ ಮಾಡುತ್ತದೆ. ಇದರಿಂದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಂದ ಸಂಗ್ರಹಿಸಿದ ಮಾದರಿಗಳನ್ನು ಪರೀಕ್ಷಿಸಲು ಸಹಾಯಕವಾಗಿದೆ. ಇದು ಮಂಗಳೂರು ಮತ್ತು ಶಿವಮೊಗ್ಗದಲ್ಲಿನ ಪರೀಕ್ಷಾ ಕೇಂದ್ರದ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ. ಪ್ರಯೋಗಾಲಯವು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.
ಆಸ್ಪತ್ರೆಗೆ ಬರುವ ಪ್ರತೀ ರೋಗಿಗೆ ಆಧಾರ್ ಸಂಖ್ಯೆ ಕಡ್ಡಾಯವಾಗಿದ್ದು, ಪ್ರತಿಯೊಬ್ಬರು ಕಡ್ಡಾಯವಾಗಿ ಮುಖಗವಸು (ಮಾಸ್ಕ್) ಧರಿಸಬೇಕು ಮತ್ತು ಒಬ್ಬ ಸಹಾಯಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.