ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ಮನು ಹಂದಾಡಿಯವರಿಂದ ನಗೆ ಹಬ್ಬ ಕಾರ್ಯಕ್ರಮ

ಕುಂದಾಪುರ : ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ, ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಮಾತೃಭಾಷೆಯನ್ನು ಉಳಿಸಿ ಬೆಳೆಸಬಹುದು ಎನ್ನುವುದನ್ನು ತೋರಿಸಿಕೊಟ್ಟ ಮನು ಹಂದಾಡಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮನು ಹಂದಾಡಿಯವರಿಂದ ವಿದ್ಯಾರ್ಥಿಗಳಿಗಾಗಿ ‘ನಗೆ ಹಬ್ಬ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕುಂದಾಪ್ರ ಕನ್ನಡದ ಕಂಪನ್ನು ಪಸರಿಸುತ್ತಾ ಸಮಾಜದಲ್ಲಿರುವ ಶಿಕ್ಷಣವಂತ, ಅಕ್ಷರವಂತ, ವಿದ್ಯಾವಂತರ ನಡುವೆ ಇರುವ ವ್ಯತ್ಯಾಸವನ್ನು ತಿಳಿಸುವುದರ ಮೂಲಕ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಮೌಲ್ಯಗಳನ್ನು ರೂಢಿಸಿಕೊಂಡು ವಿದ್ಯಾವಂತರ ಗುಂಪಿಗೆ ಸೇರಿ ಶಿಸ್ತು ಸಂಯಮವನ್ನು ಬದುಕಿನಲ್ಲಿ ಅಳವಡಿಸಿಕೊಂಡು ಯಶಸ್ಸನ್ನು ಕಾಣಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ರಾಗಿಣಿ, ವೆಂಕಟರಮಣ ಸಂಸ್ಥೆಯ ಆಡಳಿತಾಧಿಕಾರಿ ಶ್ರೀ ಪ್ರಭಾಕರ ಶಾನುಭಾಗ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಜಾಹ್ನವಿ ಶೆಟ್ಟಿ ಸ್ವಾಗತಿಸಿ, ನೇಹಾ. ಎಸ್. ರಾವ್ ವಂದಿಸಿ, ನೇಹಾ ಜೆ. ರಾವ್ ಕಾರ್ಯಕ್ರಮ ನಿರೂಪಿಸಿದರು.