ಮಣಿಪಾಲ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ 30,000 ಮುಖಗವಸುಗಳನ್ನು (ಮಾಸ್ಕ್) ವಿತರಿಸಲಾಯಿತು.
ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ಅವರು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಇಂದು ಮಾಸ್ಕ್ ಗಳನ್ನು ಹಸ್ತಾಂತರಿಸಿದರು.
ಮಣಿಪಾಲ ಸಂಸ್ಥೆಯು 2020ರ ಕೋವಿಡ್-19 ಮಹಾಮಾರಿ ಸಂದರ್ಭದಲ್ಲಿ ರಾಜ್ಯದಲ್ಲೇ ಪ್ರಪ್ರಥಮವಾಗಿ ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ಮೀಸಲಿಟ್ಟಿತ್ತು. ಈಗ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮಾಸ್ಕ್ ಗಳನ್ನು ಹಸ್ತಾಂತರಿಸಿದ್ದು, ಉಡುಪಿ ಜಿಲ್ಲಾ ಶಿಕ್ಷಣ ಇಲಾಖೆಯು ಪರೀಕ್ಷಾ ದಿನದಂದು ಅದನ್ನು ವಿದ್ಯಾರ್ಥಿಗಳಿಗೆ ವಿತರಿಸಲಿದೆ.
ಜಿಲ್ಲಾ ಸ್ಕೌಟ್ಸ್ ಅಂಡ್ ಗೈಡ್ಸ್ ಇದರ ವಿತರಣೆಯ ಜವಾಬ್ದಾರಿ ವಹಿಸಿಕೊಂಡಿದೆ. ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಚ್. ನಾಗೂರ, ಸ್ಕೌಟ್ಸ್ ಆಂಡ್ ಗೈಡ್ಸ್ ಇದರ ಜಿಲ್ಲಾ ಆಯುಕ್ತರಾದ ಡಾ. ವಿಜಯೇಂದ್ರ ರಾವ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.