ಶೀಘ್ರವೇ ಹೆಚ್ಚಳವಾಗುತ್ತ ಹಾಲಿನ ದರ: ರೂ. 8 ಹೆಚ್ಚಿಸುವಂತೆ ಹಾಲು ಒಕ್ಕೂಟಗಳ ಬೇಡಿಕೆ!

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆಯ ಸಾಧ್ಯತೆ ಎದುರಾಗಿದೆ. ಲೀಟರ್ ಹಾಲಿನ ದರವನ್ನು ₹8 ಹೆಚ್ಚಿಸುವಂತೆ ವಿವಿಧ ಹಾಲು ಉತ್ಪಾದಕರ ಒಕ್ಕೂಟಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಂಡ್ಯ, ಶಿವಮೊಗ್ಗ, ಚಾಮರಾಜನಗರ, ತುಮಕೂರು ಸೇರಿದಂತೆ ಹಲವು ಹಾಲು ಉತ್ಪಾದಕರ ಒಕ್ಕೂಟಗಳ ಪ್ರತಿನಿಧಿಗಳು, ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹8 ಹೆಚ್ಚಿಸುವುದರ ಜತೆಗೆ ರೈತರಿಗೆ ನೀಡುವ ಪ್ರೋತ್ಸಾಹಧನವನ್ನೂ ₹8ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಿದ್ದಾರೆ.

ಕಳೆದ ಎಂಟು ತಿಂಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಒಕ್ಕೂಟದ ಪ್ರತಿನಿಧಿಗಳು ಆರೋಪಿಸಿದ್ದಾರೆ. ರೈತರ ಹಿತದೃಷ್ಟಿಯಿಂದ ಕೂಡಲೇ ಹಾಲಿನ ದರ ಪರಿಷ್ಕರಿಸಬೇಕು. ಬೇಡಿಕೆ ಈಡೇರದಿದ್ದರೆ ಮೂರು ದಿನಗಳಲ್ಲಿ ವಿಧಾನಸೌಧ ಚಲೋ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ದರ ಏರಿಕೆಗೆ ಕಾರಣವೇನು?

ರಾಜ್ಯದಲ್ಲಿ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಇದರಿಂದ ಹಸಿರು ಮೇವು ಮತ್ತು ಪಶು ಆಹಾರದ ಕೊರತೆ ಉಂಟಾಗಿದ್ದು, ಪಶು ಆಹಾರ ತಯಾರಿಕೆಗೆ ಬಳಸುವ ಕಚ್ಚಾ ವಸ್ತುಗಳು, ಮೆಕ್ಕೆಜೋಳ ಹಾಗೂ ಇಂಡಿ-ಬೂಸಾ ದರದಲ್ಲಿ ಏರಿಕೆಯಾಗಿದೆ ಎಂದು ಒಕ್ಕೂಟಗಳು ತಿಳಿಸಿವೆ.

ಇದರ ಜತೆಗೆ ರಾಸುಗಳ ನೆಲಹಾಸು, ಪೆಟ್ರೋಲ್ ಮತ್ತು ಡೀಸೆಲ್ ಸೇರಿದಂತೆ ವಿವಿಧ ವೆಚ್ಚಗಳು ಹೆಚ್ಚಾಗಿರುವುದರಿಂದ ಹಾಲು ಉತ್ಪಾದನಾ ವೆಚ್ಚವೂ ಏರಿಕೆಯಾಗಿದೆ. ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಹಾಲಿನ ದರ ಹೆಚ್ಚಳ ಅಗತ್ಯ ಎಂದು ಒಕ್ಕೂಟಗಳು ಸರ್ಕಾರವನ್ನು ಒತ್ತಾಯಿಸಿವೆ.

ಸರ್ಕಾರ ಈ ಪ್ರಸ್ತಾವನೆ ಕುರಿತು ಕೈಗೊಳ್ಳುವ ನಿರ್ಧಾರದ ಬಳಿಕ ನಂದಿನಿ ಹಾಲಿನ ದರದಲ್ಲಿ ಬದಲಾವಣೆಯಾಗಲಿದೆಯೇ ಎಂಬುದು ಸ್ಪಷ್ಟವಾಗಲಿದೆ.