ಉಡುಪಿ: ಶನಿವಾರದಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾಜಧಾನಿಯಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸುವ ಪೂರ್ವಭಾವಿಯಾಗಿ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹಿಸುವ ಅಭಿಯಾನಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಚಾಲನೆ ನೀಡಿ, ಕೆಂಪೇಗೌಡರ ರಥಕ್ಕೆ ಆರತಿ ಬೆಳಗಿ, ಹಸಿರು ನಿಶಾನೆ ತೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇತಿಹಾಸವನ್ನು ತಿಳಿದುಕೊಳ್ಳದೇ ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ. ಇತಿಹಾಸದಲ್ಲಿ ಹಿರಿಯರ ತ್ಯಾಗ ಬಲಿದಾನದಿಂದ ಸಿಕ್ಕಿರುವ ಸ್ವಾತಂತ್ರ್ಯವನ್ನು ನಾವು ಸದುಪಯೋಗ ಪಡಿಸಿಕೊಳ್ಳಬೇಕು. ಬೆಂಗಳೂರಿನ ಸಮಗ್ರ ಬೆಳವಣಿಗೆಗೆ ಬಹಳ ಹಿಂದೆಯೇ ವ್ಯವಸ್ಥಿತವಾಗಿ ಯೋಜನೆ ರೂಪಿಸಿ ಹಲವು ಕೆರೆಗಳನ್ನು ನಿರ್ಮಿಸಿ ಮಾದರಿ ನಗರಗಳ ನಿರ್ಮಾಣಕ್ಕೆ ಕಾರಣಕರ್ತರಾಗಿದ್ದ ಕೆಂಪೇಗೌಡರು ಎಲ್ಲ ಆಡಳಿತಗಾರರಿಗೆ ಮಾದರಿ ಎಂದರು.
ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ರಾಜ್ಯ ಸರಕಾರದಿಂದ ಬೆಂಗಳೂರಿನಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ಮೃತ್ತಿಕೆ ಸಂಗ್ರಹಿಸಲಾಗುತ್ತಿದೆ. ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಮೆಯನ್ನು ಉದ್ಘಾಟನೆ ಮಾಡಿ ಲೋಕಾರ್ಪಣೆ ಮಾಡಲಿದ್ದಾರೆ ಎಂದರು.
ಶಾಸಕ ಕೆ.ರಘುಪತಿ ಭಟ್, ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಎಸ್.ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್., ತರಬೇತಿ ನಿರತ ಐ.ಎ.ಎಸ್. ಅಧಿಕಾರಿ ಯತೀಶ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಪಡ್ನೇಕರ್, ಯೋಜನಾ ನಿರ್ದೇಶಕ ಬಾಬು ಎಂ. ಉಪಸ್ಥಿತರಿದ್ದರು.
ಎನ್.ಆರ್.ಎಲ್.ಎಂ ವ್ಯವಸ್ಥಾಪಕ ಪ್ರಭಾಕರ ಆಚಾರ್ ಕಾರ್ಯಕ್ರಮ ನಿರ್ವಹಿಸಿದರು.