ಆರೋಗ್ಯ ಸಚಿವ ಡಾ. ಸುಧಾಕರ್ ಕೂಡಲೇ ರಾಜೀನಾಮೆ ನೀಡಬೇಕು: ಬಿಜೆಪಿ ಶಾಸಕ ರೇಣುಕಾಚಾರ್ಯ ಆಗ್ರಹ

ಹೊನ್ನಾಳಿ: ಚಾಮರಾಜನಗರ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ರೋಗಿಗಳು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿ ನೈತಿಕ ಹೊಣೆ ಹೊತ್ತು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆಗ್ರಹಿಸಿದ್ದಾರೆ.

ಚಾಮರಾಜನಗರ ಹಾಗೂ ಬೆಂಗಳೂರಿನಲ್ಲಿ ಆಮ್ಲಜನಕ ಸಿಗದೇ ಅನೇಕ ರೋಗಿಗಳು ಸಾವನ್ನಪ್ಪಿದ್ದಾರೆ. ಅವರ ಇಲಾಖೆಯಲ್ಲಿ ಏನು ನಡೆಯುತ್ತಿದೆ ಎಂಬುದನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡದೇ ಸುಧಾಕರ್ ಏನು ಮಾಡುತ್ತಿದ್ದಾರೆ ಎಂದು ಬುಧವಾರ ವಾಗ್ದಾಳಿ ನಡೆಸಿದರು.

ಸುಧಾಕರ್ ನನಗೆ ಎರಡು ಖಾತೆಗಳು ಬೇಕು ಎಂದು ಮುಖ್ಯಮಂತ್ರಿಗಳ ಬಳಿ ಡಿಮ್ಯಾಂಡ್ ಮಾಡಿ ಪಡೆದುಕೊಂಡಿದ್ದಾರೆ. ಆದರೆ ಇವರಿಂದ ಸರಿಯಾಗಿ ಒಂದು ಖಾತೆಯನ್ನೇ ನಿಭಾಯಿಸಲು ಆಗುತ್ತಿಲ್ಲ. ಇನ್ನು ಎರಡು ಖಾತೆಗಳನ್ನು ಹೇಗೆ ನಿಭಾಯಿಸುತ್ತೀರಿ ಎಂದು ಪ್ರಶ್ನಿಸಿದರು.

ಕೆಲವು ಸಚಿವರು ಮೋಜು ಮಸ್ತಿಗಾಗಿ ಸಚಿವ ಸ್ಥಾನ ಪಡೆದುಕೊಂಡಿದ್ದಾರೆ. ಅಂಥವರು ಈ ಸಚಿವ ಸಂಪುಟದಲ್ಲಿ ಇರಲು ಲಾಯಕ್ಕಿಲ್ಲ. ತಮ್ಮ ವ್ಯಾಪ್ತಿಯಲ್ಲಿ ಕೆಲಸ ಮಾಡದವರು ಸರ್ಕಾರಕ್ಕೆ ಕೆಟ್ಟ ಹೆಸರು ತರುತ್ತಾರೆ ಎಂದು ಕಿಡಿಕಾರಿದರು.