ಉಡುಪಿ: ಅಯೋಧ್ಯೆಯ ಶ್ರೀರಾಮ ಮಂದಿರದ ಹುಂಡಿ ಹಣ ಹಾಗೂ ಭಕ್ತರು ಸಮರ್ಪಿಸಿದ ಕಾಣಿಕೆಗಳ ದುರ್ಬಳಕೆ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಟ್ರಸ್ಟಿಗಳು, ಸಿಬ್ಬಂದಿ ಹಾಗೂ ಪರೋಕ್ಷವಾಗಿ ಸಹಕರಿಸಿದವರ ವಿರುದ್ಧ ಸ್ವತಂತ್ರ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ಜಾಥಾ ಹಾಗೂ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಯಿತು.
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ಮುಂಭಾಗದಿಂದ ಕಾಪು ಪೇಟೆಯವರೆಗೆ ರಾಮನಾಮ ಭಜನೆ ಹಾಗೂ ದೊಂದಿ ಬೆಳಕಿನ ಪ್ರದರ್ಶನದೊಂದಿಗೆ ಮೆರವಣಿಗೆ ನಡೆಸಿದರು.
ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಆಡಳಿತ ಮೊಕ್ತೇಸರ ನಡಿಕೆರೆ ರತ್ನಾಕರ ಶೆಟ್ಟಿ ಜಾಥಾಕ್ಕೆ ಚಾಲನೆ ನೀಡಿದರು.ಬಳಿಕ ನಡೆದ ಸಭೆಯಲ್ಲಿ ಮಾತನಾಡಿದ ವಿನಯ್ ಕುಮಾರ್ ಸೊರಕೆ, ಶ್ರೀರಾಮ ಮಂದಿರದ ಹುಂಡಿ ಹಣ ಹಾಗೂ ಕಾಣಿಕೆಗಳ ದುರ್ಬಳಕೆ ಆರೋಪದ ಕುರಿತು ಸ್ವತಂತ್ರ, ನ್ಯಾಯಸಮ್ಮತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಲಕ್ಷ್ಮೀಶ ಉಬ್ಬರಡ್ಕ ಹಾಗೂ ಸುಧೀರ್ ಕುಮಾರ್ ಮುರೊಳ್ಳಿ ದಿಕ್ಸೂಚಿ ಭಾಷಣ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, ಮುಖಂಡರಾದ ದಿವಾಕರ ಶೆಟ್ಟಿ, ನವೀನ್ ಚಂದ್ರ ಶೆಟ್ಟಿ, ನವೀನ್‌ಚಂದ್ರ ಸುವರ್ಣ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.















