ಶಾಸಕ ಹರೀಶ್ ಪೂಂಜಾ ಬೆದರಿಕೆ ಪ್ರಕರಣ: ಸಿಐಡಿಗೆ ಹಸ್ತಾಂತರ

ಬೆಳ್ತಂಗಡಿ: ಕಾರು ಓವರ್ ಟೇಕ್ ವಿಷಯದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ತಲವಾರು ತೋರಿಸಿ ಬೆದರಿಕೆ ಹಾಕಿದ್ದಾರೆನ್ನಲಾದ ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಿಐಡಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ಅ.13ರ ರಾತ್ರಿ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಎಂಬಲ್ಲಿ ಬೇರೊಂದು ಕಾರಿನಲ್ಲಿದ್ದ ವ್ಯಕ್ತಿ ಶಾಸಕ ಹರೀಶ್ ಪೂಂಜಾ ಕಾರನ್ನು ಬೆನ್ನಟ್ಟಿ ಅಡ್ಡಗಟ್ಟಿ ತಲವಾರು ತೋರಿಸಿ ಬೆದರಿಸಿರುವುದಾಗಿ ಶಾಸಕರ ಕಾರು ಚಾಲಕ ನವೀನ್ ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಮಂಗಳೂರು ಫಳ್ನೀರ್ ನಿವಾಸಿ ರಿಯಾಝ್(38) ಎಂಬಾತನನ್ನು ವಶಕ್ಕೆ ಪಡೆದಿದ್ದರು. ಆರೋಪಿ ಮನೆಯಿಂದ ಸ್ಪ್ಯಾನರ್ ಮತ್ತು ಮೊಬೈಲ್ ಹ್ಯಾಂಡ್‌ಸೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಸ್ಪ್ಯಾನರ್ ಬಳಸಿ ಶಾಸಕರ ಚಾಲಕನಿಗೆ ಬೆದರಿಕೆ ಹಾಕಿದ್ದಾನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ.

ಇದೀಗ ರಾಜ್ಯ ಸರ್ಕಾರವು ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ಆದೇಶ ನೀಡಿದ್ದು, ತನಿಖೆ ಆರಂಭಗೊಂಡಿದೆ.