ನಗರಸಭಾ ವ್ಯಾಪ್ತಿಯ ವಿವಿಧ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಒದಗಿಸಿ: ಯಶ್ ಪಾಲ್ ಸುವರ್ಣ

ಉಡುಪಿ: ಉಡುಪಿ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಭವನದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಭಾಗವಹಿಸಿ, ನಗರಸಭಾ ವ್ಯಾಪ್ತಿಯ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ ತಕ್ಷಣ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೆರ್ಗ ಸರಳಬೆಟ್ಟು ವಸತಿ ಸಮುಚ್ಚಯದ ಫಲಾನುಭವಿಗಳಿಗೆ ನವೆಂಬರ್ 1 ರೊಳಗೆ ಮನೆಗಳನ್ನು ಹಸ್ತಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಉಡುಪಿ ನಗರದ ವಾಹನ ದಟ್ಟಣೆ, ಪಾರ್ಕಿಂಗ್ ಸಮಸ್ಯೆ, ನಗರೋತ್ಥಾನ ಯೋಜನೆ ಸಹಿತ ಬಾಕಿಯಿರುವ ಅಭಿವೃದ್ಧಿ ಕಾಮಗಾರಿಗಳು, ದಾರಿ ದೀಪ ಸಮರ್ಪಕ ನಿರ್ವಹಣೆ, ಮಳೆ ಅಭಾವದಿಂದ ಮುಂದಿನ ದಿನಗಳಲ್ಲಿ ಸೃಷ್ಟಿಯಾಗಲಿರುವ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆ ನಡೆಸಿದರು.

ಸಭೆಯಲ್ಲಿ ಉಡುಪಿ ನಗರಸಭೆ ಪೌರಾಯುಕ್ತರು, ಪೊಲೀಸ್ ಇಲಾಖೆಯ ವೃತ್ತ ನಿರೀಕ್ಷಕರು, ಉಡುಪಿ ಸಂಚಾರ ಠಾಣೆ ಉಪನಿರೀಕ್ಷಕರು, ನಗರಸಭಾ ಸದಸ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.