ರಾಜ್ಯ ಮತ್ತೆ ಚುರುಕಾದ ಮುಂಗಾರು: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಜೊತೆಗೆ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕೆಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ.

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದೇ ವೇಳೆ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಳ್ಳಾರಿ, ದಾವಣಗೆರೆ, ಮೈಸೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಮೀನುಗಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.