ಮೂಡುಬಿದಿರೆ: ವಿದ್ಯುತ್ ಶಾಕ್ ತಗುಲಿ ತಾಯಿ ಮತ್ತು ಮಗ ಮೃತಪಟ್ಟ ದಾರುಣ ಘಟನೆ ಮೂಡುಬಿದಿರೆ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ನಡೆದಿದೆ.
ಮೃತರನ್ನು ಮರ್ಸಿ ಮಸ್ಕರೇನಸ್ (45) ಮತ್ತು ಅವರ ಪುತ್ರ ಶೋನ್ ಮಸ್ಕರೇನಸ್ (18) ಎಂದು ಗುರುತಿಸಲಾಗಿದೆ. ಮೂಡುಬಿದಿರೆ ಹೋಲಿ ರೋಸರಿ ಶಾಲೆಯ ವಿದ್ಯಾರ್ಥಿಯಾಗಿದ್ದ ಶೋನ್, ಬೆಳಿಗ್ಗೆ ಬಟ್ಟೆ ಒಣಗಿಸುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಬಟ್ಟೆ ಒಣಗಿಸಲು ಹಾಕಿದ್ದ ತಂತಿಗೆ ಹೈಟೆನ್ಷನ್ ವಿದ್ಯುತ್ ತಂತಿಯ ಸಂಪರ್ಕ ಉಂಟಾಗಿ ವಿದ್ಯುತ್ ಪ್ರವಹಿಸಿರಬಹುದು ಎಂದು ಶಂಕಿಸಲಾಗಿದೆ. ಈ ವೇಳೆ ವಿದ್ಯುತ್ ಶಾಕ್ಗೆ ಒಳಗಾದ ಮಗನನ್ನು ರಕ್ಷಿಸಲು ಮುಂದಾದ ತಾಯಿಗೂ ವಿದ್ಯುತ್ ಪ್ರವಹಿಸಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬೆಳಿಗ್ಗೆ ಸುಮಾರು 7ರಿಂದ 8 ಗಂಟೆಯ ವೇಳೆಗೆ ತೋಟದ ಕೆಲಸಕ್ಕೆ ಬಂದ ಕಾರ್ಮಿಕರೊಬ್ಬರು ಘಟನೆ ಗಮನಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಈ ದಾರುಣ ಘಟನೆ ಸ್ಥಳೀಯರಲ್ಲಿ ಶೋಕವನ್ನುಂಟುಮಾಡಿದೆ.















