ಮೂಡುಬಿದಿರೆ: ಪತಿಯೇ ಪತ್ನಿಯನ್ನು ಮಾರಕಾಯುಧದಿಂದ ಬರ್ಬರವಾಗಿ ಕೊಲೆ ಮಾಡಿದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ.
ಹತ್ಯೆಗೈದ ಆರೋಪಿಯನ್ನು ಮೂಡುಬಿದಿರೆಯ ಧರೆಗುಡ್ಡೆಯ ದಿನರಾಜ್ ಎಂದು ಗುರುತಿಸಲಾಗಿದೆ.
ಈತ ಪತ್ನಿಯನ್ನು ಮೂಡಬಿದಿರೆಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ತನ್ನ ಪತ್ನಿ ಮನೆಯ ಮೆಟ್ಟಲಿನಿಂದ ಜಾರಿ ಬಿದ್ದು ಗಾಯಗೊಂಡಿದ್ದಾಳೆ ಎಂದು ಹೇಳಿದ್ದನು.
ಅಲ್ಲಿ ಪರೀಕ್ಷಿಸಿದ ವೈದ್ಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದರು. ಖಾಸಗಿ ಆಸ್ಪತ್ರೆಗೆ ಹೋದ ಸಂದರ್ಭದಲ್ಲಿ ಸುನಿತಾ ಸಾವನ್ನಪ್ಪಿದ್ದು, ಮೃತದೇಹವನ್ನು ಮಂಗಳೂರಿನ ಜಿಲ್ಲಾಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಸುನಿತಾ ಸಾವಿನ ಬಗ್ಗೆ ಮನೆಯವರು ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪತಿ ದಿನರಾಜ್ನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆಗ ಹತ್ಯೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.
ಹಾರೆಯಿಂದ ಹೊಡೆದು ಕೊಲೆ ಮಾಡಿರುವುದಾಗಿ ಪ್ರಾಥಮಿಕ ವಿಚಾರಣೆಯಲ್ಲಿ ಪತಿ ದಿನರಾಜ್ ಒಪ್ಪಿಕೊಂಡಿದ್ದಾನೆ. ಆತನನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಇವರಿಬ್ಬರು ಮದುವೆಯಾಗಿ ಒಂದೂವರೆ ವರ್ಷವಾಗಿದ್ದು, ಇಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು ಎಂಬ ಮಾಹಿತಿ ತಿಳಿದುಬಂದಿದೆ. ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.