ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶಗೌಡ ಗೌಡರ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ತನಿಖೆ ನಡೆಸುತ್ತಿರುವ ಸಿಬಿಐ ಇದೀಗ ವಿಚಾರಣೆಗೆ ಹಾಜರಾಗುವಂತೆ ಕೋರಿ ಕಾಂಗ್ರೆಸ್ ಮುಖಂಡನ ಸಹೋದರನಿಗೆ ನೋಟಿಸ್ ಜಾರಿ ಮಾಡಿದೆ.
ಧಾರವಾಡದ ಕಾಂಗ್ರೆಸ್ ಮುಖಂಡ ವಿನಯ ಕುಲಕರ್ಣಿ ಅವರ ಸಹೋದರ ವಿಜಯ್ ಅವರಿಗೆ ಸಿಬಿಐ ನೋಟಿಸ್ ನೀಡಿದ್ದು, ಅದರಂತೆ ನೋಟಿಸ್ ಪಡೆದಿರುವ ವಿಜಯ್, ನಗರದಲ್ಲಿರುವ ಸಿಬಿಐ ಕಚೇರಿಗೆ ವಿಚಾರಣೆಗಾಗಿ ಸೋಮವಾರ ಬೆಳಿಗ್ಗೆ ಹಾಜರಾಗಿದ್ದಾರೆ. ಸಿಬಿಐ ಅಧಿಕಾರಿಗಳು ವಿಜಯ್ ವಿಚಾರಣೆ ನಡೆಸುತ್ತಿದ್ದಾರೆ.
ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿಗಳು ಸಾಕಷ್ಟು ಮಾಹಿತಿ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಅದರಂತೆ ವಿಚಾರಣೆ ನಡೆಸುತ್ತಿರುವ ಸಿಬಿಐ, ಇದೀಗ ವಿಜಯ್ ಕುಲಕರ್ಣಿ ಅವರಿಗೆ ವಿಚಾರಣೆ ಹಾಜರಾಗುವಂತೆ ಕೋರಿ ನೋಟಿಸ್ ನೀಡಿದೆ.