ಹೊಸದಿಲ್ಲಿ: ದಿಲ್ಲಿಯ ಜಂತರ್ ಮಂತರ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನಡೆದ ನೀಟ್ ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಬಂಧಿತ ಪ್ರತಿಭಟನಾಕಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ನಿರ್ದೇಶನ ನೀಡಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠ, ನ್ಯಾಯಮೂರ್ತಿಗಳಾದ ಜಾಯ್‌ಮಲ್ಯ ಬಾಗ್ಚಿ ಮತ್ತು ವಿ. ಮೋಹನ್ ಅವರನ್ನು ಒಳಗೊಂಡು ವಿಚಾರಣೆ ನಡೆಸಿ, ವಿವಿಧ ರಾಜ್ಯಗಳಲ್ಲಿ ಬಂಧಿತರಾಗಿರುವ ಅಪ್ರಾಪ್ತ ವಯಸ್ಕ ವಿದ್ಯಾರ್ಥಿಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಪೊಲೀಸರಿಗೆ ಆದೇಶಿಸಿದೆ.
ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದ ಆರೋಪಗಳ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ತನಿಖೆ ನಡೆಸುವಂತೆ ನ್ಯಾಯಾಲಯ ಸೂಚಿಸಿದೆ. ಯಾವುದೇ ಕ್ರಿಮಿನಲ್ ಹಿನ್ನೆಲೆಯಿಲ್ಲದ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಬೇಕೆಂದು ಕೂಡ ಪೀಠ ನಿರ್ದೇಶಿಸಿದೆ.
ನೀಟ್ ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ದೌರ್ಜನ್ಯದ ಆರೋಪಗಳು ಗಂಭೀರವಾಗಿದ್ದು, ಅವುಗಳ ಕುರಿತು ನ್ಯಾಯಯುತ ಹಾಗೂ ಸ್ವತಂತ್ರ ತನಿಖೆ ನಡೆಯಬೇಕಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಕಾನೂನು ಉಲ್ಲಂಘನೆ ಅಥವಾ ಅತಿರೇಕದ ಕೃತ್ಯ ಎಸಗಿದವರ ವಿರುದ್ಧ ಮಾತ್ರ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು. ನಿಯಮ ಉಲ್ಲಂಘನೆ ಕಂಡುಬಂದರೆ ಅದನ್ನು ಕಾನೂನುಬದ್ಧವಾಗಿ ನಿಭಾಯಿಸಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.















