ಬೆಂಗಳೂರು: ಕೊರೊನಾ ಸೋಂಕು ಹೆಚ್ಚಾಗುವ ಭೀತಿ ಇರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ವರ್ಷಾಚರಣೆಗೆ ಹೊಸ ನಿಯಮವನ್ನು ಜಾರಿಗೊಳಿಸಿದೆ. ಡಿ. 31ರ ಸಂಜೆ 6 ಗಂಟೆಯಿಂದ ಜ. 1ರ ಬೆಳಿಗ್ಗೆ 6 ಗಂಟೆಯವರೆಗೆ ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಅಂದು ರಾತ್ರಿ ಐದು ಹಾಗೂ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ. ರಸ್ತೆ, ಉದ್ಯಾನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ವರ್ಷಾಚರಣೆ ಮಾಡಲು ಅವಕಾಶವಿಲ್ಲ. ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಅಪಾರ್ಟ್‌ಮೆಂಟ್ ಸಮುಚ್ಚಯದ ನಿವಾಸಿಗಳು, ಕ್ಲಬ್‌ನವರು ಹಾಗೂ ಇತರರು, ತಮ್ಮ ನಿಗದಿತ ಜಾಗದಲ್ಲಿ ತಮ್ಮದೇ ಸದಸ್ಯರ ಜೊತೆ ಮಾತ್ರ ವರ್ಷಾಚರಣೆ ಮಾಡಬಹುದು. ಇಂಥ ಕಾರ್ಯಕ್ರಮಗಳಲ್ಲಿ ಹೊರಗಿನವರಿಗೆ ಅವಕಾಶ ನೀಡಬಾರದು. ಈ ಬಗ್ಗೆ ಆಡಳಿತ ಮಂಡಳಿ ಗಮನ ಹರಿಸಬೇಕು ಎಂದೂ ಹೇಳಿದರು.
ಹೊಸ ವರ್ಷಾಚರಣೆ ಕಾರ್ಯಕ್ರಮ ಸಂಘಟಿಸುವುದು ಹಾಗೂ ಅದರ ಕೂಪನ್– ಚೀಟಿಯನ್ನು ಹಂಚಿಕೆ ಮಾಡುವುದಕ್ಕೆ ಅವಕಾಶವಿಲ್ಲ. ಹೋಟೆಲ್, ರೆಸ್ಟೋರೆಂಟ್‌ನವರು ನಿತ್ಯದ ರೀತಿಯಲ್ಲೇ ಕೆಲಸ ಮಾಡಬಹುದು. ನೃತ್ಯ ಹಾಗೂ ಇತರೆ ವಿಶೇಷ ಕಾರ್ಯಕ್ರಮ ಆಯೋಜಿಸಬಾರದು’ ಎಂದು ಖಡಕ್ ಸೂಚನೆ ನೀಡಿದ್ದಾರೆ.