ಹೂಡೆ ಸಮೀಪ ರಸ್ತೆ ಬದಿ ಎಸೆಯಲ್ಪಟ್ಟ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ

ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ನವಜಾತ ಗಂಡು ಶಿಶು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ಮನೆಯೊಂದಕ್ಕೆ ತೆರಳುವ ಕಾಲುದಾರಿಯಲ್ಲಿ ಕೆಲವೇ ಸಮಯದ ಹಿಂದೆ ಜನಿಸಿದ್ದ ಎನ್ನಲಾದ ಗಂಡು ಮಗು ಪತ್ತೆಯಾಗಿತ್ತು. ಸ್ಥಳೀಯರು ಮಗುವನ್ನು ಗಮನಿಸಿ ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರು.

ವೈದ್ಯರು ನಡೆಸಿದ ಪ್ರಾಥಮಿಕ ಪರೀಕ್ಷೆಯಲ್ಲಿ ಮಗುವಿನ ಹೃದಯ ಬಡಿತ ಕಂಡುಬಂದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ಮಾಹಿತಿ ಪಡೆದ ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನವಜಾತ ಶಿಶುವನ್ನು ರಸ್ತೆ ಬದಿಯಲ್ಲಿ ಎಸೆದವರು ಯಾರು ಎಂಬುದರ ಪತ್ತೆಗೆ ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.