ಬೆಂಗಳೂರು: 2023 ರ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಕಾರ್ಯತಂತ್ರದ ಬಗ್ಗೆ ಸೂಚನೆಯನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬೆಂಗಳೂರು ಭೇಟಿ ಸದ್ಯಕ್ಕಂತೂ ಯಾವುದೇ ಫಲಿತಾಂಶವನ್ನು ನೀಡಿದಂತೆ ಕಾಣುತ್ತಿಲ್ಲ. ರಾಜ್ಯ ಬಿಜೆಪಿ ಕೋರ್ ಕಮಿಟಿ ಮತ್ತು ಪಕ್ಷದ ನಾಯಕರೊಂದಿಗೆ ನಿಗದಿಪಡಿಸಲಾಗಿದ್ದ ಸಭೆ ರದ್ದುಗೊಂಡಿರುವುದು ಬೊಮ್ಮಾಯಿ ಅವರೆ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎನ್ನುವ ಸೂಚನೆ ಎಂದು ಬಲ್ಲ ಮೂಲಗಳು ತಿಳಿಸುತ್ತಿವೆ.
ಅಮಿತ್ ಶಾ ಅವರ ಬೆಂಗಳೂರು ಭೇಟಿ ಮುಖ್ಯಮಂತ್ರಿ ಬದಲಾವಣೆ ಅಥವಾ ಸಂಪುಟ ಪುನಾರಚನೆಯ ಮುನ್ಸೂಚನೆ ಎಂಬ ಉಹಾಪೋಹಗಳು ಹಲವು ದಿನಗಳಿಂದ ಹರಿದಾಡುತ್ತಿದ್ದವು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ನಿವಾಸದಲ್ಲಿ ಬಿಜೆಪಿ ಸಚಿವರು, ಶಾಸಕರು ಮತ್ತು ಸಂಸದರಿಗೆ ಏರ್ಪಡಿಸಿದ್ದ ಉಪಾಹಾರ ಕೂಟದಲ್ಲಿ ಪಾಲ್ಗೊಳ್ಳುವಿಕೆ ಮತ್ತು ಬಿಜೆಪಿ ರಾಜ್ಯ ಕೋರ್ ಕಮಿಟಿ, ಪಕ್ಷದ ಪದಾಧಿಕಾರಿಗಳು ಮತ್ತು ಪಕ್ಷದ ವಿವಿಧ ಘಟಕಗಳ ಪ್ರತ್ಯೇಕ ಸಭೆಗಳ ಅಧ್ಯಕ್ಷತೆಯನ್ನು ಬಿಜೆಪಿಯ ಹಿರಿಯ ಮುಖಂಡ ವಹಿಸಬೇಕಿತ್ತು.
2023 ರ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರಗಳನ್ನು ವಿವರಿಸಲು ಮತ್ತು ಸರ್ಕಾರದಲ್ಲಿ ಸಂಭವನೀಯ ಬದಲಾವಣೆಗಳನ್ನು ಸೂಚಿಸಲು ಸಭೆಗಳನ್ನು ನಿಗದಿಪಡಿಸಲಾಗಿತ್ತು. ಆದರೆ ಬೊಮ್ಮಾಯಿ ಅವರ ಅಧಿಕೃತ ನಿವಾಸದಲ್ಲಿ ಊಟದ ನಂತರ ಪಕ್ಷದ ಘಟಕಗಳ ಜೊತೆಗಿನ ಸಭೆಯನ್ನು ದಿಢೀರ್ ರದ್ದುಗೊಳಿಸಲಾಗಿದೆ. ಈ ರದ್ದತಿಯು ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಗೆ ಒಮ್ಮತಕ್ಕೆ ಬರಲು ಸಾಧ್ಯವಿಲ್ಲ ಎನ್ನುವ ಸೂಚನೆ ನೀಡಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡಾ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎನ್ನುವುದನ್ನು ಪುನರುಚ್ಛರಿಸಿದ್ದಾರೆ.