ಜ. 22 ರಂದು ರಾಜ್ಯದಲ್ಲಿ ಶಾಲೆಗಳಿಗೆ ರಜೆ ಇಲ್ಲ: ಶಿಕ್ಷಣ ಇಲಾಖೆ ಸ್ಪಷ್ಟನೆ

ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಜನವರಿ 22 ರಂದು ಶಾಲೆಗಳಿಗೆ ರಜೆ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

“ನಾವು ಜನವರಿ 22 ರಂದು ಶಾಲೆಗಳಿಗೆ ರಜೆ ಘೋಷಿಸುತ್ತಿಲ್ಲ. ಅದು ಕೆಲಸದ ದಿನವಾಗಿರುತ್ತದೆ. (ಬೆಂಗಳೂರು) ನಗರ ಅಥವಾ ರಾಜ್ಯದಲ್ಲಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಉಂಟಾದರೆ, ಆಯಾ ಜಿಲ್ಲಾಧಿಕಾರಿಗಳು ರಜೆ ಘೋಷಿಸಲು ಕರೆ ನೀಡುತ್ತಾರೆ” ಎಂದು ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಗುರುವಾರ ತಿಳಿಸಿರುವುದಾಗಿ ದ ಇಂಡಿಯನ್ ಎಕ್ಸ್ಪ್ರೆಸ್ ವರದಿ ಹೇಳಿದೆ.

ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್ ಆಫ್ ಸ್ಕೂಲ್ಸ್ ಇನ್ ಕರ್ನಾಟಕ (KAMS) ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸದಂತೆ ಮತ್ತು ಅದರ ಬದಲಾಗಿ ಸಮಾರಂಭವನ್ನು ನೇರಪ್ರಸಾರ ಮಾಡಲು ಎಲ್ಲಾ ಸದಸ್ಯ ಶಾಲೆಗಳಿಗೆ ನಿರ್ದೇಶನವನ್ನು ನೀಡಿದೆ.

“ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭವು ಇಡೀ ದೇಶದ ಗಮನವನ್ನು ಸೆಳೆದಿದೆ. ಈ ಹಿನ್ನೆಲೆಯಲ್ಲಿ ಸಂಘದ ಎಲ್ಲಾ ಸದಸ್ಯರು ತಮ್ಮ ತಮ್ಮ ಶಾಲೆಗಳಲ್ಲಿ ಒಂದೂವರೆ ಗಂಟೆಗಳ ಕಾಲ ಕಾರ್ಯಕ್ರಮವನ್ನು ನೇರಪ್ರಸಾರ ಮಾಡುವಂತೆ ಸೂಚಿಸಲಾಗಿದೆ” ಎಂದು ಕಾಮ್ಸ್ ಪ್ರಧಾನ ಕಾರ್ಯದರ್ಶಿ ಡಿ ಶಶಿಕುಮಾರ್ ನಿರ್ದೇಶನ ನೀಡಿದ್ದಾರೆ.

ಆಯಾ ಶಿಕ್ಷಣ ಸಂಸ್ಥೆಗಳು ರಾಜಕೀಯವನ್ನು ಹೊರಗಿಡುವ ರೀತಿಯಲ್ಲಿ ಈ ಕಾರ್ಯಕ್ರಮವನ್ನು ನಡೆಸಬೇಕು ಮತ್ತು ಐತಿಹಾಸಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂದರ್ಭದಲ್ಲಿ ರಾಮ ಜನ್ಮಭೂಮಿಯ ಮಹತ್ವವನ್ನು ಪ್ರದರ್ಶಿಸಬೇಕು. ರಜೆಯನ್ನು ಘೋಷಿಸುವುದು ಸರಿಯಾದ ದಿಕ್ಕಿನಲ್ಲಿ ಹೆಜ್ಜೆಯಲ್ಲ ಮತ್ತು ವಿದ್ಯಾರ್ಥಿಗಳು ಒಟ್ಟಿಗೆ ಐತಿಹಾಸಿಕ ಕ್ಷಣವನ್ನು ವೀಕ್ಷಿಸುವ ಅನುಭವವನ್ನು ಕಳೆದುಕೊಳ್ಳುತ್ತಾರೆ ಎಂಬುದು ನಮ್ಮ ಅಭಿಪ್ರಾಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಏತನ್ಮಧ್ಯೆ, ಶ್ರೀರಾಮ ಸೇನೆಯ ಬೆಂಗಳೂರು ಘಟಕವು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದು, ಜನವರಿ 22 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಗೋವಾ, ಛತ್ತೀಸ್‌ಗಢ ಮತ್ತು ಹರಿಯಾಣ ಸರ್ಕಾರಗಳು ಈ ದಿನದಂದು ಶಾಲೆಗೆ ರಜೆ ಘೋಷಿಸಿವೆ.