ಬೆಂಗಳೂರು: ರಾಜ್ಯದಲ್ಲಿ ಸದ್ಯ ಲಾಕ್ ಡೌನ್ ಅಥವಾ ಅರೆ ಲಾಕ್ ಡೌನ್ ಹೇರುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದರು.
ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಿಗೆ ಕೊರೊನಾ ಎರಡನೇ ಅಲೆ ತಟ್ಟಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಕೊರೊನಾ ಎರಡನೇ ಅಲೆ ಹರಡುವ ಮುನ್ಸೂಚನೆ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಅಥವಾ ಅರೆ ಲಾಕ್ ಡೌನ್ ಹೇರುವ ಸಂಭವವಿದೆ ಎನ್ನಲಾಗುತ್ತಿತ್ತು. ಆದರೆ ಅದಕ್ಕೆ ಸಚಿವ ಸುಧಾಕರ್ ತೆರೆ ಎಳೆದಿದ್ದಾರೆ.
ರಾಜ್ಯದಲ್ಲಿ ಲಾಕ್ ಡೌನ್ ಅಥವಾ ಅರೆ ಲಾಕ್ ಡೌನ್ ಹೇರುವ ಸ್ಥಿತಿ ನಿರ್ಮಾಣವಾಗಿಲ್ಲ. ಆದರೆ ಜನ ಸಾಮಾನ್ಯರು ಸಾಕಷ್ಟು ಎಚ್ಚರ ವಹಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರ, ಕೇರಳದಿಂದ ರಾಜ್ಯಕ್ಕೆ ಬರುವವರನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸುವ ಸಂಬಂಧ ಸದ್ಯದಲ್ಲೇ ಗೃಹ ಹಾಗೂ ಕಂದಾಯ ಸಚಿವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.