ನ. 1ರಂದು ವಿಶುಕುಮಾರ್ ಪ್ರಶಸ್ತಿ ಪ್ರದಾನ

ಉಡುಪಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿಯು 2026ನೇ ಸಾಲಿನ ವಿಶುಕುಮಾರ್ ಪ್ರಶಸ್ತಿಗೆ ಜಾನಪದ ವಿದ್ವಾಂಸ, ಸಾಹಿತಿ ಹಾಗೂ ಸಂಶೋಧಕ ಬನ್ನಂಜೆ ಬಾಬು ಅಮೀನ್ ಅವರನ್ನು ಆಯ್ಕೆ ಮಾಡಿದೆ.

ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ನವೆಂಬರ್ 1ರ ಭಾನುವಾರ ಬೆಳಿಗ್ಗೆ 9.30ಕ್ಕೆ ಉಡುಪಿಯ ಯಕ್ಷಗಾನ ಕಲಾರಂಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಡು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿಯಲ್ಲಿ ಜನಿಸಿ ಕನ್ನಡ ಸಾರಸ್ವತ ಲೋಕದಲ್ಲಿ ವಿಶಿಷ್ಟ ಛಾಪು ಮೂಡಿಸಿದ ವಿಶುಕುಮಾರ್ ಅವರು ಕಥೆಗಾರ, ಕಾದಂಬರಿಕಾರ, ನಟ, ನಾಟಕಕಾರ, ಬರಹಗಾರ ಹಾಗೂ ಕನ್ನಡ ಮತ್ತು ತುಳು ಚಲನಚಿತ್ರಗಳ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರು.

ಸಾಹಿತ್ಯ, ರಂಗಭೂಮಿ ಮತ್ತು ಚಲನಚಿತ್ರ ಕ್ಷೇತ್ರಗಳಿಗೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸುವ ಉದ್ದೇಶದಿಂದ ಯುವವಾಹಿನಿ ಸಂಸ್ಥೆಯು ಈ ಪ್ರಶಸ್ತಿಯನ್ನು ನೀಡುತ್ತಿದೆ ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಬಂಟ್ವಾಳದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ತುಕರಾಮ್ ಪೂಜಾರಿ ಅಭಿನಂದನಾ ಭಾಷಣ ಮಾಡಲಿದ್ದಾರೆ.

ಯುವ ಸಾಹಿತಿ ತಜ್ಞಾ ಆರ್. ಅವರಿಗೆ ಡಾ. ಪ್ರಭಾಕರ್ ನೀರ್‌ಮಾರ್ಗ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಯುವ ಬರಹಗಾರರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಈ ಪ್ರಶಸ್ತಿಯ ಉದ್ದೇಶವಾಗಿದೆ.

ಸಾಹಿತಿ ಹಾಗೂ ಲೇಖಕ ಬಿಪಿನ್ ಚಂದ್ರ ಪಾಲ್ ಸಮಾರಂಭ ಉದ್ಘಾಟಿಸಲಿದ್ದು, ಅಶೋಕ್ ಕುಮಾರ್ ಪಡ್ಡು ಅಧ್ಯಕ್ಷತೆ ವಹಿಸಲಿದ್ದಾರೆ.

ಗೋವಾದ ಬಿಲ್ಲವ ಸಂಘದ ಗೌರವಾಧ್ಯಕ್ಷ ಚಂದ್ರಹಾಸ್ ಅಮೀನ್ ಹಾಗೂ ಸಾಹಿತಿ ವಿಶುಕುಮಾರ್ ಅವರ ಪತ್ನಿ ವಿಜಯಲಕ್ಷ್ಮಿ ವಿಶುಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ:ಸಮಾರಂಭದಲ್ಲಿ ಸಿನಿದನಿ ಕಿರುಚಿತ್ರ ಸ್ಪರ್ಧೆ, ಜ್ಞಾನ ಮಂಥನ ರಸಪ್ರಶ್ನೆ ಸ್ಪರ್ಧೆ, ವಿಶು ಕಾವ್ಯಾಮೃತ ಕವನ ಸ್ಪರ್ಧೆ ಹಾಗೂ ವಿಶುವಿಹಂಗಮ ಕೃತಿ ವಿಮರ್ಶೆ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಗುವುದು.

ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದ ಸಾಧಕರನ್ನು ಗೌರವಿಸುವುದರೊಂದಿಗೆ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಈ ಕಾರ್ಯಕ್ರಮದಲ್ಲಿ ಸಾಹಿತಿಗಳು, ಕಲಾವಿದರು, ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಯುವವಾಹಿನಿ ಕೇಂದ್ರ ಸಮಿತಿಯ ವಿಶುಕುಮಾರ್ ದತ್ತಿನಿಧಿ ಸಂಚಾಲನಾ ಸಮಿತಿಯ ಸಂಚಾಲಕ ಜಗದೀಶ್ ಕುಮಾರ್ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ದತ್ತಿನಿಧಿ ಸಂಚಾಲನಾ ಸಮಿತಿಯ ಸಹಸಂಚಾಲಕ ದಯಾನಂದ ಕರ್ಕೇರ ಉಗ್ರೆಲ್ ಬೆಟ್ಟು ಹಾಗೂ ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷ ವಿನೋದ್ ಮಂಚಿ ಉಪಸ್ಥಿತರಿದ್ದರು.