ಜೈಲು ಸೇರಿದರೂ ಚಟ ಬಿಟ್ಟಿಲ್ಲ,ಪ್ರಜ್ವಲ್ ರೇವಣ್ಣ ಮೊಬೈಲ್ ನಲ್ಲಿ 90 ಅಶ್ಲೀಲ ವಿಡಿಯೋ ಪತ್ತೆ!

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಅತ್ಯಾಚಾರ ಪ್ರಕರಣದ ಅಪರಾಧಿ ಪ್ರಜ್ವಲ್ ರೇವಣ್ಣ ಅವರ ಸೆಲ್‌ನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಮೊಬೈಲ್ ಪತ್ತೆಯಾದ ಬೆನ್ನಲ್ಲೇ ಜೈಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ವಿಐಪಿ ಸೆಲ್‌ನಲ್ಲಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಜನರಲ್ ಕೈದಿಗಳಿರುವ ಬ್ಯಾರಕ್‌ಗೆ ಸ್ಥಳಾಂತರಿಸಲಾಗಿದೆ.

ಸುಮಾರು 20 ಕೈದಿಗಳಿರುವ ಬ್ಯಾರಕ್‌ಗೆ ಅವರನ್ನು ಶಿಫ್ಟ್ ಮಾಡಲಾಗಿದ್ದು, ಸಿಸಿಟಿವಿ ಕಣ್ಗಾವಲಿನಲ್ಲಿ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

90 ಅಶ್ಲೀಲ ವಿಡಿಯೋ ಪತ್ತೆ

ಪ್ರಜ್ವಲ್ ರೇವಣ್ಣ ಅವರ ಬಳಿ ಪತ್ತೆಯಾದ ಮೊಬೈಲ್ ಪರಿಶೀಲನೆ ವೇಳೆ ಸುಮಾರು 90 ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ ಎನ್ನಲಾಗಿದೆ. ಅಲ್ಲದೇ, ಪರಿಚಿತರೊಂದಿಗೆ ನಡೆಸಿದ ಸಂಭಾಷಣೆಯ ಆಡಿಯೋ ರೆಕಾರ್ಡ್‌ಗಳು ಹಾಗೂ ಅಪರಿಚಿತ ವ್ಯಕ್ತಿಯೊಂದಿಗಿನ ಮಾತುಕತೆಯ ವಿವರಗಳೂ ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.

ಇದರ ನಡುವೆ, ಜೈಲು ಕೊಠಡಿಯೊಳಗೆ ಜೈಲು ಸಮವಸ್ತ್ರ ಧರಿಸದೇ ವೈಯಕ್ತಿಕ ಉಡುಪು ಧರಿಸಿ ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಮಾತನಾಡುತ್ತಿರುವ ವಿಡಿಯೋವೊಂದು ಬೆಳಕಿಗೆ ಬಂದಿದೆ. ಈ ವಿಡಿಯೋವನ್ನು ಯಾವಾಗ ಚಿತ್ರೀಕರಿಸಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ನಿನ್ನೆ ಸಿಸಿಬಿ ಅಧಿಕಾರಿಗಳು ಜೈಲು ಕೊಠಡಿ ಮೇಲೆ ದಾಳಿ ನಡೆಸಿದ ವೇಳೆ ಮೊಬೈಲ್ ಫೋನ್ ಪತ್ತೆಯಾಗಿತ್ತು. ಇದೀಗ ಈ ಪ್ರಕರಣ ಜೈಲಿನ ಭದ್ರತಾ ವ್ಯವಸ್ಥೆ ಹಾಗೂ ನಿಯಮಗಳ ಪಾಲನೆ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.