ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ವತಿಯಿಂದ ಸಾಮಾಜಿಕ ಕಳಕಳಿಯ ಧ್ಯೇಯದಡಿ ಉಡುಪಿ ಜಿಲ್ಲೆಯ ಸುಮಾರು 50 ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ 15ಲಕ್ಷ ಮೌಲ್ಯದ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಜೂನ್ 27ರಂದು ಬೆಳಿಗ್ಗೆ 10.30ಕ್ಕೆ ನಗರದ ಟೌನ್ ಹಾಲ್‌ನಲ್ಲಿ ನಡೆಯಲಿದೆ ಎಂದು ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಾರ್ಯಕ್ರಮವನ್ನು ಮಾಜಿ ಸಚಿವ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಉದ್ಘಾಟಿಸಲಿದ್ದಾರೆ.
ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಪ್ರಾಂಶುಪಾಲ ಅಶೋಕ್ ಕಾಮತ್ ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಧೀರ್ ಕುಮಾರ್ ಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಸಂಪನ್ಮೂಲ ವ್ಯಕ್ತಿ ದಾಮೋದರ ಶರ್ಮ ಬಾರ್ಕೂರು ಅವರು ಬೆಳಿಗ್ಗೆ 9.30ರಿಂದ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ.
2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಜಿಲ್ಲೆಯ ಕನ್ನಡ ಮಾಧ್ಯಮ ಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ₹5 ಲಕ್ಷಕ್ಕೂ ಅಧಿಕ ಮೊತ್ತದ ವಿದ್ಯಾರ್ಥಿ ಸಹಾಯಧನ ಮತ್ತು ಪ್ರತಿಭಾ ಪುರಸ್ಕಾರಗಳನ್ನು ಸೊಸೈಟಿ ವತಿಯಿಂದ ವಿತರಿಸಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್, ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

















