ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ವಿರೋಧ: ರಾಜ್ಯ ಸರ್ಕಾರದ ವಿರುದ್ಧ ಭುಗಿಲೆದ್ದ ರೈತರು

ಬೆಂಗಳೂರು: ರಾಜ್ಯ ಸರ್ಕಾರವು ಸುಗ್ರೀವಾಜ್ಞೆ ಮೂಲಕ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ವಿದ್ಯುತ್ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ವಿರೋಧಿಸಿ ರಾಜ್ಯದ ಸಾವಿರಾರು ರೈತರು ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ರೈತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ಸ್ವಾತಂತ್ರ್ಯ ಉದ್ಯಾನ ಎದುರಿನ ರಸ್ತೆಯಲ್ಲಿ ಜಮಾಯಿಸಿದ್ದ ಸಾವಿರಾರು ರೈತರು ರಾಜ್ಯ ಸರ್ಕಾರದ ದಿಕ್ಕಾರ ಕೂಗಿದರು. ವಿಧಾನಸೌಧದತ್ತ ಹೋಗಿ‌ ಮುತ್ತಿಗೆ ಹಾಕಲು ಮುಂದಾದರು. ಆದರೆ ಮಾರ್ಗಮಧ್ಯೆಯೇ ಪೊಲೀಸರು ಅವರನ್ನು ತಡೆದರು. ರಸ್ತೆಯಲ್ಲಿ ಕುಳಿತು ರೈತರು ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ, ರೈತರ ಪರವಾಗಿ ನಿಲ್ಲಬೇಕಿದ್ದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕಾರ್ಪೊರೇಟ್ ಕಂಪನಿಗಳ ಪರ ನಿಲುವು ಹೊಂದಿವೆ. ಇದರಿಂದ ರೈತರು ಭೂಮಿ ಕಳೆದುಕೊಳ್ಳುವ ಹಾಗೂ ಸಂಕಷ್ಟಕ್ಕೆ ಸಿಲುಕುವ ಕಾಲ ಬರಲಿದೆ. ಇಂಥ ನಡೆಯನ್ನು ಸರ್ಕಾರಗಳು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದರು.