ಉಡುಪಿ: ಮಾಜಿ ಸಚಿವ ದಿ. ಆಸ್ಕರ್ ಫೆರ್ನಾಂಡಿಸ್ ಅವರ ಪ್ರಥಮ ಪುಣ್ಯತಿಥಿಯನ್ನು ಆಚರಿಸುವ
ಸಲುವಾಗಿ ಸರ್ಕಾರಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಕಾರ್ಯಕ್ರಮವನ್ನು ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಳ್ಳಲಾಯಿತು.
ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ವತಿಯಿಂದ ಉಡುಪಿಯ ಅಜ್ಜರಕಾಡು ಸರಕಾರಿ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ದಿ. ಆಸ್ಕರ್ ಫೆರ್ನಾಂಡಿಸ್ ಅವರ ಪುಣ್ಯತಿಥಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ದಿವಂಗತ ಆಸ್ಕರ್ ಫೆರ್ನಾಂಡಿಸ್ ರವರ ವ್ಯಕ್ತಿತ್ವಕ್ಕೆ ಅನುಗುಣವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಮಾಜದಲ್ಲಿರುವ ಶೋಷಿತರು, ಬಡವರು ಮತ್ತು ನಿರ್ಗತಿಕರ ಕಷ್ಟಗಳಿಗೆ ಆಸ್ಕರ್ ಫೆರ್ನಾಂಡಿಸ್ ರವರು ಸ್ಪಂದಿಸುತ್ತಿದ್ದರು. ಅವರ ಅಭಿಮಾನಿಗಳು ಈ ಕಾರ್ಯಕ್ರಮಗಳ ಮೂಲಕ ಅವರ ಪುಣ್ಯತಿಥಿಯನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ ಎಂದರು.
ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ಗೌರವಾಧ್ಯಕ್ಷ ರೊನಾಲ್ಡ್ ಮನೋಹರ್ ಕರ್ಕಡ, ಪ್ರಮುಖರಾದ ಮಂಜಿತ್ ನಾಗರಾಜ್, ಮಹಮ್ಮದ್ ಶೀಶ್, ಕಾಂಗ್ರೆಸ್ ಮುಖಂಡರಾದ ಎಂ. ಎ. ಗಫೂರ್, ರಮೇಶ್ ಕಾಂಚನ್, ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ, ಅರ್ವಿನ್ ಫೆರ್ನಾಂಡಿಸ್, ನವೀನ್ ಶೆಟ್ಟಿ, ಹರೀಶ್ ಶೆಟ್ಟಿ, ಜಿಲ್ಲಾಸ್ಪತ್ರೆ ಸರ್ಜನ್ ಡಾ. ಮಧುಸೂದನ ನಾಯಕ್ ಉಪಸ್ಥಿತರಿದ್ದರು.












