ಬೆಂಗಳೂರು: ಕಾಂಗ್ರೆಸ್ ಉಡುಪಿ-ಚಿಕ್ಕಮಗಳೂರಿಗೆ ಜಯಪ್ರಕಾಶ್ ಹೆಗ್ಡೆ ಮತ್ತು ದಕ್ಷಿಣ ಕನ್ನಡಕ್ಕೆ ಆರ್. ಪದ್ಮರಾಜ್ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ಎರಡು ಕ್ಷೇತ್ರ ಸೇರಿ 17 ಕ್ಷೇತ್ರಗಳ ಕೈ ಅಭ್ಯರ್ಥಿಗಳ ಹೆಸರು ಅಂತಿಮಗೊಂಡಿದ್ದು, ಇಂದು ಪಟ್ಟಿ ಘೋಷಣೆಯಾಗಲಿದೆ. ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ದಿಲ್ಲಿಯಲ್ಲಿ ನಡೆದ ಸಭೆಯಲ್ಲಿ ಚುನಾವಣಾ ಸಮಿತಿ ಬಾಕಿಯಿದ್ದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಅಂತಿಮಗೊಳಿಸಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 21 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದಿದೆ. ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬಳ್ಳಾರಿ ಈ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿಲ್ಲ ಎಂದು ತಿಳಿದುಬಂದಿದೆ.
ಎಐಸಿಸಿ ನಾಯಕಿ ಸೋನಿಯಾ ಗಾಂಧಿ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ. ಕೆ. ಶಿವಕುಮಾರ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದ ಸಿಇಸಿ ಸಭೆಯಲ್ಲಿ ಒಟ್ಟು 17 ಕ್ಷೇತ್ರಗಳ ಟಿಕೆಟ್ ಅಂತಿಮಗೊಳಿಸಲಾಗಿದೆ. 7 ಕ್ಷೇತ್ರಗಳಿಗೆ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಈಗಾಗಲೇ ಟಿಕೆಟ್ ಘೋಷಣೆಯಾಗಿದೆ.
ಪಟ್ಟಿಯಲ್ಲಿ ಐವರು ಸಚಿವರ ಮಕ್ಕಳಿಗೆ ಟಿಕೆಟ್ ನೀಡಲಾಗಿದೆ ಎಂದು ತಿಳಿದುಬಂದಿದೆ. ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳಕ್ಕರ್ ಪುತ್ರ ಮೃಣಾಲ್‌ಗೆ ಹಾಗೂ ಚಿಕ್ಕೋಡಿಯಿಂದ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾಗೆ ಅವಕಾಶ ನೀಡಲಾಗಿದ್ದು, ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತ ಪಾಟೀಲ್‌ಗೆ ಬಾಗಲಕೋಟೆಯಿಂದ ಟಿಕೆಟ್ ನೀಡಲಾಗಿದೆ. ಶಾಮನೂರು ಶಿವಶಂಕರಪ್ಪ ಸೊಸೆ ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಿಂದ ಹಾಗೂ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ಬೆಂಗಳೂರು ದಕ್ಷಿಣದಿಂದ ಟಿಕೆಟ್ ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.