ಶಿವಮೊಗ್ಗ: ಕಳೆದ 27 ವರ್ಷ ನಂತರ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಅಧಿಪತ್ಯ ಸ್ಥಾಪಿಸಿದೆ. 15 ವಾರ್ಡ್ ಗಳ ಪೈಕಿ ಕಾಂಗ್ರೆಸ್ 9 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿ 6 ಸ್ಥಾನಗಳಲ್ಲಿ ಜಯಗಳಿಸಿದೆ.
ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ , ಸಂಸದ ಬಿ.ವೈ.ರಾಘವೇಂದ್ರ, ಸಚಿವ ಕೆ.ಎಸ್.ಈಶ್ವರಪ್ಪ ಖುದ್ದು ಚುನಾವಣೆ ಪ್ರಚಾರ ನಡೆಸಿದ್ದರು. ಆದರೂ ಬಹುಮತ ಪಡೆಯಲು ಬಿಜೆಪಿಗೆ ಸಾಧ್ಯವಾಗಿಲ್ಲ.
ಕಾಂಗ್ರೆಸ್‌ನಿಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಈಚೆಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಆರ್.ಎಂ.ಮಂಜುನಾಥ ಗೌಡ, ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಭರ್ಜರಿ ಪ್ರಚಾರ ನಡೆಸಿ ಕಾಂಗ್ರೆಸ್ ಅನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭದ್ರಾವತಿ ನಗರಸಭೆ ಕಾಂಗ್ರೆಸ್ ತೆಕ್ಕೆಗೆ:
ತೀವ್ರ ಕುತೂಹಲ ಕೆರಳಿಸಿದ ಭದ್ರಾವತಿ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸಿದೆ. 34 ವಾರ್ಡ್ ಗಳಲ್ಲಿ ಕಾಂಗ್ರೆಸ್ 18, ಜೆಡಿಎಸ್ 11, ಬಿಜೆಪಿ 4, ಪಕ್ಷೇತರ ಒಂದು ಸ್ಥಾನ ಗಳಿಸಿದೆ.
ಕಬಡ್ಡಿ ಪಂದ್ಯಾವಳಿಯಲ್ಲಿ ಜೈಶ್ರೀರಾಮ್ ಘೋಷಣೆ ವಿವಾದ ಹಿನ್ನೆಲೆ ಬಿಜೆಪಿ ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿತ್ತು. ಖುದ್ದು ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಜಿಲ್ಲೆಯ ಎಲ್ಲ ನಿಗಮಮಂಡಳಿ ಸದಸ್ಯರು ವಾರಗಟ್ಟಲೇ ಬೀಡುಬಿಟ್ಟಿದ್ದರು.
ಕಳೆದ ಬಾರಿ 23 ಸ್ಥಾನ ಪಡೆದಿದ್ದ ಜೆಡಿಎಸ್ ಈ ಬಾರಿ ನಾಯಕತ್ವ ಕೊರತೆಯಿಂದ ಕೇವಲ 11 ಸ್ಥಾನಕ್ಕೆ ಕುಸಿದಿದೆ.