ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವವನ್ನು ನಾಡಹಬ್ಬದಂತೆ ಆಚರಿಸಲು ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಹಕಾರ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಅವರು ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಉಡುಪಿ ಪರ್ಯಾಯ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದರು.
ಜ.17-18 ರಂದು ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವು ನಡೆಯಲಿದ್ದು, ಪರ್ಯಾಯ ಮಹೋತ್ಸವಕ್ಕೆ ಸುಮಾರು 3 ಲಕ್ಷ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದ್ದು, ನೈರ್ಮಲ್ಯ ಮತ್ತು ಘನ ತ್ಯಾಜ್ಯ ವಸ್ತು ವಿಲೇವಾರಿಯ ಉಸ್ತುವಾರಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅವರು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.
ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ರಥಬೀದಿಯ ಅಕ್ಕಪಕ್ಕದ ಪ್ರದೇಶಗಳಲ್ಲಿಯೂ ಸ್ವಚ್ಛತೆ ಕಾಪಾಡಬೇಕು. ಕೆ.ಎಸ್.ಅರ್.ಟಿ.ಸಿ ಬಸ್ ನಿಲ್ದಾಣ, ಸರ್ವಿಸ್ ಮತ್ತು ಸಿಟಿ ಬಸ್ ನಿಲ್ದಾಣ, ಶ್ರೀ ಕೃಷ್ಣ ಮಠದ ವಾಹನಗಳ ನಿಲುಗಡೆ ಪ್ರದೇಶದಲ್ಲಿ ಸಾರ್ವಜನಿಕ ಶೌಚಾಲಯಗಳಿದ್ದು, ಸಾರ್ವಜನಿಕರ ಓಡಾಟ ಇರುವ ಇನ್ನು ಕೆಲವು ಸ್ಥಳಗಳಲ್ಲಿ ತಾತ್ಕಾಲಿಕವಾದ ಶೌಚಾಲಯಗಳನ್ನು ನಿರ್ಮಿಸಬೇಕು. ಬೀದಿದೀಪಗಳ ಸರಿಪಡಿಸುವಿಕೆ, ರಸ್ತೆ ದುರಸ್ತಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಶಾಸಕ ರಘುಪತಿ ಭಟ್ ಮಾತನಾಡಿ, ಪರ್ಯಾಯ ಸಂದರ್ಭದಲ್ಲಿ ರಥಬೀದಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಲು ಸುಮಾರು 80 ಕಾರ್ಮಿಕರನ್ನು ಹೆಚ್ಚುವರಿಯಾಗಿ ಬಳಸಿಕೊಳ್ಳಲಾಗುವುದು. ಪರ್ಯಾಯ ಮೆರವಣಿಗೆ ಸಂದರ್ಭದಲ್ಲಿ ನಾಡಿನ ಕಲೆ, ಸಂಸ್ಕøತಿ ಬಿಂಬಿಸುವ ಸ್ಥಬ್ಧ ಚಿತ್ರಗಳನ್ನು ವಿವಿಧ ಇಲಾಖೆಗಳು ಬಳಸಿಕೊಳ್ಳುವಂತೆ ಸೂಚಿಸಿದರು.
ಈಗಾಗಲೇ ಉಡುಪಿ ನಗರ ಪ್ರವೇಶಿಸುವ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ಅಗತ್ಯ ಇರುವ ಕಡೆ ಬೀದಿ ದೀಪಗಳ ದುರಸ್ತಿ, ತಾತ್ಕಾಲಿಕ ಶೌಚಾಲಯ ಮಾಡಲಾಗುವುದು ಎಂದು ಶಾಸಕರು ತಿಳಿಸಿದರು.
ಉಡುಪಿ ಪರ್ಯಾಯ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ,ಎಸ್ ಯಡಿಯೂರಪ್ಪ, ಕೇಂದ್ರ ಸಚಿವೆ ನಿರ್ಮ¯ ಸೀತಾರಾಮನ್ ಸೇರಿದಂತೆ ವಿವಿಧ ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಅವರು ಹೇಳಿದರು.
ಸಭೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹಲೋತ್, ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ನಗರಸಭೆ ಆಯುಕ್ತ ಆನಂದ್ ಕಲ್ಲೋಲ್ಕರ್, ಎಂ.ಬಿ ಪುರಾಣಿಕ್ ಮತ್ತಿತರರು ಉಪಸ್ಥಿತರಿದ್ದರು.