ಪಟ್ಲ: ರೂರಲ್ ಎಜುಕೇಶನ್ ಸೊಸೈಟಿ (ರಿ.), ವಿದ್ಯಾನಗರ ಪಟ್ಲ ಇದರ ಆಡಳಿತ ಮಂಡಳಿ, ಪೋಷಕರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಯು.ಎಸ್. ನಾಯಕ್ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶಾಂತಪ್ಪ ಮೂಲಂಗಿ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಲೋಕಮಾನ್ಯ ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಸೀತಾರಾಮ್ ಅವರನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಗಮಿಸಿ, ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಅಭಿನಂದಿಸಿ ಶುಭ ಹಾರೈಸಿದರು.
ಸಂಸ್ಥೆಯ ಸಂಚಾಲಕ ಡಾ. ಕೆ. ನಾರಾಯಣ ಶೆಣೈ ಮಾತನಾಡಿ, ಪ್ರಶಸ್ತಿ ಪಡೆದ ಶಿಕ್ಷಕರು ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದು, ಇದರಿಂದ ಅವರ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿಯೂ ತಮ್ಮ ಕರ್ತವ್ಯದಲ್ಲಿ ಯಶಸ್ಸು ಕಾಣುವಂತಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಶ ನಾಯಕ್, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಸಂಸ್ಥೆಯ ಬಗ್ಗೆ ಹೊಂದಿರುವ ಕಾಳಜಿ ಹಾಗೂ ನೀಡುತ್ತಿರುವ ಸಹಾಯಹಸ್ತವನ್ನು ಸ್ಮರಿಸಿ, ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಅಭಿನಂದಿಸಿದರು.
ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಜಯರಾಜ ಶೆಟ್ಟಿ ಸ್ವಾಗತಿಸಿದರು. ಶಿಕ್ಷಕ ಸ್ವದೇಶ್ ಶೆಟ್ಟಿ ವಂದಿಸಿದರು. ಶಿಕ್ಷಕಿ ದೀಪಾ ಕಾರ್ಯಕ್ರಮ ಸಂಯೋಜಿಸಿದರು. ಕುಮಾರಿ ಪ್ರಾರ್ಥನಾ ಹಾಗೂ ಚಿನ್ಮಯಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಸಮೂಹ ಸಂಸ್ಥೆಗಳ ಗುರೂಜಿ–ಮಾತಾಜಿಯವರು, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.















