ಉಡುಪಿ: ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಉಸಿರಾಟ ಸಮಸ್ಯೆಯಿಂದಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು, ಸ್ವಾಮೀಜಿಗಳು, ಮುಖಂಡರು ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದರು.
ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಳಿಗ್ಗೆ ಆಸ್ಪತ್ರೆಗೆ ಭೇಟಿ ನೀಡಿದರು. ವೈದ್ಯರೊಂದಿಗೆ ಸಮಾಲೋಚನೆ ನಡೆಸಿ, ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಭೇಟಿ ಮಾಡಿ ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಠಕ್ಕೆ ಆಗಮಿಸಿ ಪೇಜಾವರ ಶ್ರೀಪಾದರು ಶೀಘ್ರ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಶಾಸಕ ರಘುಪತಿ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದರು. ಶ್ರೀಗಳ ಆರೋಗ್ಯದಲ್ಲಿ ಸುಧಾರಣೆ ಕಾಣುತ್ತಿದ್ದಾರೆ. ಭಕ್ತರು, ಶ್ರೀಗಳ ಅಭಿಮಾನಿಗಳು ತಮ್ಮ ಮನೆಯಿಂದಲೇ ಶ್ರೀಗಳ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಎಂದು ವಿನಂತಿ ಮಾಡಿದರು.
ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶ್ರೀಗಳ ಆರೋಗ್ಯವು ಬೆಳಿಗ್ಗೆಗೆ ಹೋಲಿಸಿದರೆ ಚೇತರಿಕೆ ಕಂಡುಬರುತ್ತಿದೆ. ಅವರು ಬಹುಬೇಗನೆ ಚೇತರಿಕೆಗೊಂಡುಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವ ವಿಶ್ವಾಸವಿದೆ ಎಂದರು. ಪೇಜಾವರ ಕಿರಿಯ ಶ್ರೀ ವಿಶ್ವಪ್ರಸನ್ನ ಶ್ರೀಪಾದರು, ಅದಮಾರು ಮಠದ ವಿಶ್ವಪ್ರಿಯ ಶ್ರೀಪಾದರು, ಎಡನೀರು ಮಠದ ಕೇಶವಾನಂದ ಭಾರತಿ ಸ್ವಾಮೀಜಿ, ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ಸ್ವಾಮೀಜಿ, ಸಿರಿಗೆರೆ ತರಳಬಾಳು ಶ್ರೀಗಳು, ಕನ್ಯಾಡಿಯ ಬ್ರಹ್ಮಾನಂದ
ಸರಸ್ವತಿ ಶ್ರೀಪಾದರು ಆಸ್ಪತ್ರೆಗೆ ಭೇಟಿ ನೀಡಿದರು. ಸಚಿವ ಈಶ್ವರಪ್ಪ, ಶಾಸಕ ಲಾಲಾಜಿ ಆರ್. ಮೆಂಡನ್, ಜಿಲ್ಲಾಧಿಽಕಾರಿ ಜಿ. ಜಗದೀಶ್, ಎಸ್ಪಿ ನಿಶಾ ಜೇಮ್ಸ್, ಸಿಇಒ ಪ್ರೀತಿ ಗೆಹ್ಲೋಟ್, ಎಡಿಸಿ ಸದಾಶಿವ ಪ್ರಭು, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕಲ್ಲಡ್ಕ ಪ್ರಭಾಕರ ಭಟ್, ಡಾ. ಮೋಹನ ಆಳ್ವ, ಭುವನೇಂದ್ರ ಕಿದಿಯೂರು ಸಹಿತ ಹಲವಾರು ಮಂದಿ ಗಣ್ಯರು ಭೇಟಿ ನೀಡಿದರು.












