ಇಂದು ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ: ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಅಯೋಧ್ಯಾ ಧಾಮ್ ರೈಲು ನಿಲ್ದಾಣ ಉದ್ಘಾಟನೆ

ಆಯೋಧ್ಯೆ: ರಾಮ ಮಂದಿರದ ರಾಮ ಲಲ್ಲಾ ಪ್ರಾಣಪ್ರತಿಷ್ಠೆಗೂ ವಾರಗಳ ಮೊದಲು, ಪ್ರಧಾನಿ ನರೇಂದ್ರ ಮೋದಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಡಿಸೆಂಬರ್ 30, ಶನಿವಾರದಂದು ಉತ್ತರ ಪ್ರದೇಶದ ಅಯೋಧ್ಯೆಯ ದೇವಾಲಯ ಪಟ್ಟಣಕ್ಕೆ ಭೇಟಿ ನೀಡಲಿದ್ದು, ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಅಯೋಧ್ಯಾ ಧಾಮ್ ರೈಲು ನಿಲ್ದಾಣ ಮತ್ತು ಸುಮಾರು 15,000 ಕೋಟಿ ರೂ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ 10.30ಕ್ಕೆ ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದು, ಅಲ್ಲಿ ಅವರ 16 ಕಿಮೀ ರೋಡ್‌ಶೋ ಮೂಲಕ ಪ್ರಯಾಣಿಸಲಿದ್ದಾರೆ. ಬೆಳಿಗ್ಗೆ 11:15 ರ ಸುಮಾರಿಗೆ, ಮೋದಿ ಅವರು ಪುನರಾಭಿವೃದ್ಧಿಗೊಂಡ ಅಯೋಧ್ಯೆ ರೈಲು ನಿಲ್ದಾಣ ಅಥವಾ ಅಯೋಧ್ಯಾ ಧಾಮ್ ರೈಲು ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಮತ್ತು ಹೊಸ ಅಮೃತ್ ಭಾರತ್ ರೈಲುಗಳು ಮತ್ತು ವಂದೇ ಭಾರತ್ ರೈಲುಗಳನ್ನು ಫ್ಲ್ಯಾಗ್ ಆಫ್ ಮಾಡಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ. ಮೋದಿ ಅವರು ಇನ್ನೂ ಹಲವಾರು ರೈಲ್ವೆ ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ಮಧ್ಯಾಹ್ನ 12:15 ರ ಸುಮಾರಿಗೆ ಪ್ರಧಾನಿಯವರು ಹೊಸದಾಗಿ ನಿರ್ಮಿಸಲಾದ ಅಯೋಧ್ಯೆ ವಿಮಾನ ನಿಲ್ದಾಣ ಅಥವಾ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ.

ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ರಾಜ್ಯದಲ್ಲಿ15,700 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮಾಡಲಿದ್ದಾರೆ.

ನಯಾ ಘಾಟ್‌ನಿಂದ ಲಕ್ಷ್ಮಣ ಘಾಟ್‌ವರೆಗಿನ ಪ್ರವಾಸಿ ಸೌಲಭ್ಯಗಳ ಅಭಿವೃದ್ಧಿ ಮತ್ತು ಸೌಂದರ್ಯೀಕರಣ, ದೀಪೋತ್ಸವದಂತಹ ಕಾರ್ಯಕ್ರಮಗಳಿಗಾಗಿ ಸಂದರ್ಶಕರ ಗ್ಯಾಲರಿ ನಿರ್ಮಾಣ ಮತ್ತು ರಾಮ್ ಕಿ ಪೈಡಿಯಿಂದ ರಾಜ್ ಘಾಟ್ ಮತ್ತು ರಾಜ್ ಘಾಟ್‌ವರೆಗಿನ ಯಾತ್ರಿಕರ ಮಾರ್ಗದ ಅಭಿವೃದ್ದಿ ಮತ್ತು ನವೀಕರಣ ಯೋಜನೆಯ ಶಂಕುಸ್ಥಾಪನೆಯನ್ನು ಮಾಡಲಿದ್ದಾರೆ.