ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್‌ಐ ವರ್ಗಾವಣೆ

ಉಡುಪಿ: ಪ್ರದೀಪ್ ಪೂಜಾರಿ ಪ್ರಕರಣದ ನಿರ್ವಹಣೆಯಲ್ಲಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.

ಹೆಚ್ಚುವರಿ ಪೊಲೀಸ್ ಅಧೀಕ್ಷಕರು ನಡೆಸಿದ ವಿಚಾರಣೆಯ ವರದಿಯನ್ನು ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಿಗೆ (ಡಿಐಜಿ) ಸಲ್ಲಿಸಲಾಗಿದೆ. ಇದರ ಆಧಾರದಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್‌ಐ ಅವರನ್ನು ಪಶ್ಚಿಮ ವಲಯದ ಡಿಐಜಿ ಕಚೇರಿಗೆ ವರ್ಗಾವಣೆಗೊಳಿಸಿ, ಅವರ ವಿರುದ್ಧ ಶಿಸ್ತು ಕ್ರಮ ಆರಂಭಿಸಲಾಗಿದೆ.

ಅಲ್ಲದೆ, ಆಸ್ಪತ್ರೆಯಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಕರ್ತವ್ಯದ ಅವಧಿಯಲ್ಲಿ ನಿರ್ಲಕ್ಷ್ಯ ತೋರಿರುವುದು ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಸಲ್ಲಿಸಿದ ವರದಿಯಲ್ಲಿ ಉಲ್ಲೇಖವಾಗಿದೆ.

ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ಅಮಾನತುಗೊಳಿಸಲಾಗಿದ್ದು, ಅವರ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಮುಂದುವರಿದಿದೆ.