ಜ.22 ರಂದು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರಜಾಧ್ವನಿ ಯಾತ್ರೆ ಬೃಹತ್ ಸಮಾವೇಶ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಜ.22 ರಂದು ಬೆಳಿಗ್ಗೆ 10 ಗಂಟೆಗೆ ಪ್ರಜಾಧ್ವನಿ ಯಾತ್ರೆ ಬೃಹತ್ ಸಮಾವೇಶವನ್ನು ಉಡುಪಿಯ ಕ್ರಿಶ್ಚಿಯನ್ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳು, ಮಿತಿಮೀರಿದ ಭ್ರಷ್ಟಾಚಾರ, ಪೊಲೀಸ್ ನೇಮಕಾತಿಯಲ್ಲಿ ಲಂಚದ ಬೇಡಿಕೆ, ಭೂ ಕಬಳಿಕೆ ಹಗರಣ, ಕೋವಿಡ್-19 ಮಹಾಮಾರಿ ಸಂದರ್ಭದಲ್ಲಿ ವೈದ್ಯಕೀಯ ಸಲಕರಣೆಗಳಲ್ಲಿ ಅವ್ಯವಹಾರ, ಆಹಾರ ಕಿಟ್‌ನಲ್ಲಿ ಭ್ರಷ್ಟಾಚಾರ, ಮಕ್ಕಳಿಗೆ ಅಂಗನವಾಡಿಯಲ್ಲಿ ನೀಡುತ್ತಿರುವ ಮೊಟ್ಟೆಯಲ್ಲೂ ಹಗರಣ, ಇಂಧನ ಇಲಾಖೆಯಲ್ಲಿ ಭ್ರಷ್ಟಾಚಾರ, ಅಕ್ರಮವಾಗಿ ಶಾಸಕರನ್ನು ಖರೀದಿಸಿ ಜನಬೆಂಬಲವಿಲ್ಲದೆ ಸರ್ಕಾರ ರಚನೆ, ಕಾಂಟ್ಯಾಕ್ಟರ್‌ಗಳಿಂದ 40% ಲಂಚದ ಬೇಡಿಕೆ, ಸರ್ಕಾರದ ಬಹುತೇಕ ಎಲ್ಲಾ ಇಲಾಖೆಗಳಲ್ಲಿ ವಿಪರೀತ ಭ್ರಷ್ಟಾಚಾರ, ಇಂತಹ ಹತ್ತು ಹಲವು ವಿಷಯಗಳಿಂದ ಸಾರ್ವಜನಿಕರು ಸೋತು ಹೋಗಿದ್ದು, ಬದಲಾವಣೆಯ ಗಾಳಿ ಬೀಸುತ್ತಿದ್ದು ಜನರು ಕಾಂಗ್ರೆಸ್ ಸರ್ಕಾರವನ್ನು ಬಯಸುತ್ತಿದ್ದಾರೆ.

ರಾಜ್ಯಾದ್ಯಂತ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯ, ಭ್ರಷ್ಟಾಚಾರ, ಹಗರಣ, ಜನವಿರೋಧಿ ನೀತಿಯನ್ನು ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ “ಪ್ರಜಾಧ್ವನಿ ಯಾತ್ರೆ” ಈಗಾಗಲೇ ಪ್ರಾರಂಭವಾಗಿದ್ದು ಜ.22 ಆದಿತ್ಯವಾರದಂದು ಬೆಳಿಗ್ಗೆ 10.00 ಗಂಟೆಗೆ ಸರಿಯಾಗಿ ಉಡುಪಿಯ ಕ್ರಿಶ್ಚಿಯನ್ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ಮಾಜಿ ಮುಖ್ಯಮಂತ್ರಿಗಳು, ವಿಪಕ್ಷ ನಾಯಕರು, ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿರುವ ಧೀಮಂತ ನಾಯಕ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ರಾಜ್ಯದ ಎಲ್ಲಾ ನಾಯಕರು ಬಸ್ ಯಾತ್ರೆಯ ಮೂಲಕ ಆಗಮಿಸುತ್ತಿದ್ದು ಈ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಹಿರಿಯ, ಕಿರಿಯ ನಾಯಕರು ಹಾಗೂ ಕಾರ್ಯಕರ್ತರು, ಸಾರ್ವಜನಿಕರರು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿ ಮಾಡಿದ್ದಾರೆ.