ಜಿಲ್ಲೆಯಲ್ಲಿ ಸೆಪ್ಟಂಬರ್ ಮಾಹೆಯಿಂದ ಪ್ರಜಾಸೇವೆ ಆಂದೋಲನ ಸಭೆ ಆಯೋಜನೆ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜಿಲ್ಲೆಯ ಜನಸಾಮಾನ್ಯರ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ಸೆ. 5 ರಿಂದ ಪ್ರತೀ ಶನಿವಾರ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಆಂದೋಲನ ಸಭೆ ಆಯೋಜಿಸಲಾಗುತ್ತಿದ್ದು, ಸಭೆಗಳನ್ನು ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಪ್ರಜಾಸೇವೆ ಆಂದೋಲನ ಸಭೆಗಳನ್ನು ಆಯೋಜಿಸುವ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಆಯೊಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಪ್ರಜಾಸೇವಾ ಇಲಾಖೆಯ ವತಿಯಿಂದ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲು ರಾಜ್ಯ ಸರ್ಕಾರವು ನಿರ್ಧರಿಸಿದ್ದು, ಸೆಪ್ಟಂಬರ್ 5 ರಿಂದ 1 ನೇ ಮತ್ತು 3ನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಸ್ಥಳೀಯ ಶಾಸಕರ ಉಪಸ್ಥಿತಿಯಲ್ಲಿ ತಾಲ್ಲೂಕು ಮಟ್ಟದ ಸಭೆಗಳು ಜರುಗಲಿವೆ.

2 ನೇ ಮತ್ತು 4 ನೇ ಶನಿವಾರದಂದು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹೋಬಳಿ ಮತ್ತು ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಸಭೆಗಳನ್ನು ಆಯೋಜಿಸಲಾಗುವುದು ಎಂದರು.

ಸರ್ಕಾರದ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳು ಅರ್ಹ ಜನರಿಗೆ ತಲುಪುವಂತೆ ಮಾಡುವುದರ ಜೊತೆಗೆ ಕಚೇರಿಗಳಿಗೆ ತಮ್ಮ ಕೆಲಸಕ್ಕಾಗಿ ಪದೇ ಪದೇ ಅಲೆಯುವುದನ್ನು ತಪ್ಪಿಸಲು ಈ ಸಭೆಗಳನ್ನು ಆಯೋಜಿಸಲಾಗುತ್ತಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಿಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದ್ದು, ಸಾರ್ವಜನಿಕರು ಪ್ರಜಾಸೇವೆ ಆಂದೋಲನಾ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಅಹವಾಲುಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅಧಿಕಾರಿಗಳು ಮುತುವರ್ಜಿಯಿಂದ ಕೆಲಸ ಮಾಡಬೇಕೆಂದರು.

ಸಭೆ ನಡೆಯುವ ದಿನಾಂಕಕ್ಕೂ 15 ದಿನಗಳ ಮುಂಚಿತವಾಗಿ ಸಂಬoಧಪಟ್ಟ ಕ್ಷೇತ್ರ ಮಟ್ಟದ ಅಧಿಕಾರಿಗಳು ಮನೆ ಮನೆ ಭೇಟಿ ನೀಡಿ ಅಹವಾಲುಗಳಿಗೆ ಸಂಬoಧಿಸಿದ ಪೂರ್ವ ಮುದ್ರಿತ ಅರ್ಜಿ ನಮೂನೆಗಳನ್ನು ತಲುಪಿಸಬೇಕು. ಸಭೆ ನಡೆಯುವ ಸ್ಥಳಗಳಲ್ಲಿ ಗಣಕಯಂತ್ರ, ಇಂಟರ್‌ನೆಟ್, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವುದರೊಂದಿಗೆ ಇಲಾಖಾವಾರು ಕೌಂಟರ್‌ಗಳನ್ನು ಸ್ಥಾಪಿಸಬೇಕು.

ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಸಭೆಯಲ್ಲಿ ಹಾಜರಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದ ಅವರು, ಸಭೆ ನಡೆಯುವ ದಿನ ಸಂಬoಧಪಟ್ಟ ಇಲಾಖೆಗಳು ಬೇರೆ ಯಾವುದೇ ಸಭೆಗಳನ್ನು ನಿಗದಿಪಡಿಸುವಂತಿಲ್ಲ ಎಂದರು.

ಸದರಿ ಸಭೆಗಳಲ್ಲಿ ಜಿಲ್ಲೆಯ ಪ್ರಮುಖ ಇಲಾಖೆಗಳು ವಸ್ತು ಪ್ರದರ್ಶನದ ಮಳಿಗೆಗಳನ್ನು ಸ್ಥಾಪಿಸಿ, ಇಲಾಖೆಯಿಂದ ದೊರೆಯುವ ಸೇವೆ ಸೌಲಭ್ಯಗಳ ಕುರಿತು ಮಾಹಿತಿ ನೀಡಬೇಕು. ಫಲಾನುಭವಿಗಳಿಗೆ ಯಾವುದೇ ಸೌಲಭ್ಯ ವಿತರಣೆ ಇದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ತಾಲೂಕು ಮಟ್ಟದ ಸಭೆಗಳಲ್ಲಿ ವಿತರಿಸಲು ಅಗತ್ಯ ತಯಾರಿ ಮಾಡಿಟ್ಟುಕೊಳ್ಳಬೇಕು ಎಂದರು.

ಪ್ರಜಾಸೇವೆ ಆಂದೋಲನ ಸಭೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದರೊಂದಿಗೆ ಅವರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್‌ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.