ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಯನ್ನು ಗ್ರೂಪ್ ಸಿ ಹುದ್ದೆಗೆ ಮರು ನೇಮಕ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.ಈ ಕುರಿತಂತೆ ಇಂದು ಟ್ವಿಟ್ ಮಾಡಿರುವಂತ ಅವರು, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ ಎಂದಿದ್ದಾರೆ.
ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂಬುದಾಗಿ ತಿಳಿಸಿದ್ದಾರೆ.
ಅಂದಹಾಗೇ ಪ್ರವೀಣ್ ನೆಟ್ಟಾರು ಪತ್ನಿಯನ್ನು ಗ್ರೂಪ್-ಸಿ ಹುದ್ದೆಗೆ ನೇಮಕವನ್ನು ಬಿಜೆಪಿ ಸರ್ಕಾರವಿದ್ದಾಗ ಮಾಡಲಾಗಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯಸರ್ಕಾರ ಅಸ್ಥಿತ್ವಕ್ಕೆ ಬಂದ ನಂತ್ರ, ಹಿಂದಿನ ಸರ್ಕಾರದ ಅವಧಿಯ ಗುತ್ತಿಗೆ, ಹೊರಗುತ್ತಿಗೆ ನೇಮಕಾತಿಯನ್ನು ರದ್ದುಗೊಳಿಸಿತ್ತು. ಪ್ರವೀಣ್ ನೆಟ್ಟಾರು ಪತ್ನಿ ನೂತನಾಕುಮಾರಿಯನ್ನು ಗುತ್ತಿಗೆ ಹುದ್ದೆಯಿಂದ ತೆಗೆದು ಹಾಕಲಾಗಿತ್ತು. ಇದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದರು. ಈ ಬೆನ್ನಲ್ಲೇ ಈಗ ಮರು ನೇಮಕ ಮಾಡಿಕೊಳ್ಳುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.