ಗಂಗೊಳ್ಳಿ : ಸಮಾಜದ ಜನರಿಗೆ ವಿಚಾರಗಳು, ಜ್ಞಾನ ಹಾಗೂ ಮನರಂಜನೆ ನೀಡುವುದು ಪತ್ರಿಕೋದ್ಯಮದ ಮೂಲ ಆಶಯ. ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ಸರಿಯಾಗಿ ಕಾರ್ಯನಿರ್ವಹಿಸುವಂತೆ ಪತ್ರಿಕಾ ರಂಗ ಕಣ್ಗಾವಲು ಮಾಡುತ್ತಿದೆ. ಸ್ವಾತಂತ್ರ್ಯಪೂರ್ವದಲ್ಲಿ ಪ್ರಾರಂಭವಾದ ಪತ್ರಿಕೋದ್ಯಮ ಬ್ರಿಟಿಷರ, ದುರಾಡಳಿತ, ಅನ್ಯಾಯವನ್ನು ವಿರೋಧಿಸಿ ಬೆಳೆದು ಬಂದಿತ್ತು. ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಭವಾಗಿರುವ ಪತ್ರಿಕೋದ್ಯಮ ಸಮಾಜದ ಬೆಳವಣಿಗೆಗೆ, ಜನರ ಹಿತಕ್ಷಣೆ ಕಾಪಾಡುವಲ್ಲಿ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಕುಂದಪ್ರಭ ಸಂಪಾದಕ ಯು.ಎಸ್.ಶೆಣೈ ಹೇಳಿದರು.
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಮತ್ತು ಗಂಗೊಳ್ಳಿ ರೋಟರಿ ಕ್ಲಬ್ ಸಹಯೋಗದೊಂದಿಗೆ ಗಂಗೊಳ್ಳಿ ಸ.ವಿ.ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಅಂಗವಾಗಿ ಜರಗಿದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಕಾಲೇಜಿನ ಸಂಚಾಲಕ ಎನ್.ಸದಾಶಿವ ನಾಯಕ್, ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಮತ್ತು ಗಂಗೊಳ್ಳಿ ರೋಟರಿ ಕ್ಲಬ್ನ ಅಧ್ಯಕ್ಷ ಶಿವಾನಂದ ಪೂಜಾರಿ ಶುಭ ಹಾರೈಸಿದರು.
ಪತ್ರಕರ್ತ ಶ್ರೀಪತಿ ಹೆಗಡೆ ಹಕ್ಲಾಡಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪತ್ರಕರ್ತ ಬಿ.ರಾಘವೇಂದ್ರ ಪೈ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.















